ಮಡಿಕೇರಿ | ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಬಿಜೆಪಿ, ಸಂಘಪರಿವಾರದ 9 ಮಂದಿ ವಿರುದ್ಧ FIR

ಮಡಿಕೇರಿ: ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಹಾಗೂ ಹಿಂದುತ್ವ ಸಂಘಟನೆಯ 9 ಮಂದಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ಪ್ರಕಾಶ್ ಆಚಾರ್ಯ ನೀಡಿದ್ದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕವನ್ ಕಾರ್ಯಪ್ಪ, ಉಮೇಶ್ ಸುಬ್ರಮಣಿ, ಸತ್ಯ ಕರ್ಕೆರ, ಮಹೇಶ್ ಜೈನಿ, ನವೀನ್ ಪೂಜಾರಿ, ಅರುಣ್ ಶೆಟ್ಟಿ, ಸಬಿತಾ, ಶ್ವೇತಾ, ಭರತ್, ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಸದ್ಯ ಎಲ್ಲರೂ ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.
ಮಡಿಕೇರಿ ನಗರ ಪೊಲೀಸ್ ಠಾಣೆಗೆ ಹೆಚ್ಚುವರಿ ಪೊಲೀಸ್ ಪಡೆಗಳ ಆಗಮಿಸಿದ್ದು, ಠಾಣೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್, ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ.
ಇನ್ನು ಗುಡ್ಡೆಹೊಸೂರು ಬಳಿ ತೆರಳುತ್ತಿದ್ದ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪದಡಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು 9 ಮಂದಿಯನ್ನು ಗುರುವಾರವೇ ಬಂಧಿಸಿದ್ದರು. ಬಳಿಕ ತಡರಾತ್ರಿ ನ್ಯಾಯಧೀಶರ ಮುಂದೆ ಹಾಜರುಪಡಿಸಿ ಬಿಡುಗಡೆಗೊಳಿಸಲಾಗಿದೆ.







