ಭಾಷೆ, ಸಂಸ್ಕೃತಿಯಿಂದ ಉತ್ತಮ ನಡವಳಿಕೆ: ಸಚಿವ ಸುನೀಲ್
ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಕಾಪು: ಭಾಷೆ, ಸಂಸ್ಕೃತಿಯಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಮಾಜವನ್ನು ಸಾಂಸ್ಕೃತಿಕ ಚಟುವಟಿಕೆ ಯಿಂದ ತಿದ್ದಬಹುದಾಗಿದೆ. ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಅತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ರವಿವಾರ ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗೃಹದಲ್ಲಿ ಆಯೋಜಿಸಲಾದ ಯುವವಾಹಿನಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಡೆನ್ನಾನ ಡೆನ್ನನ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕಾಪು ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲುವು ಸಹಜ. ಸೋಲನ್ನು ಸವಾಲಾಗಿ ಸ್ವೀಕರಿಸಿದಾಗ ಗೆಲುವಿನ ಮೆಟ್ಟಲು ಹತ್ತಿರವಾಗುತ್ತದೆ ಎಂದು ತಿಳಿಸಿದರು.
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ವಿಜೇತ ಗುರುರಾಜ್ ಪೂಜಾರಿಯವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಜಿಪಂ ಮಾಜಿ ಸದಸ್ಯೆ ಶಿಲ್ಪ ಸುವರ್ಣ, ಉಡುಪಿ ಯುವವಾಹಿನಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ, ಕಾರ್ಯಕ್ರಮ ಸಂಚಾಲಕರಾದ ಮಹಾ ಬಲ ಅಮೀನ್, ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು.
ಉಡುಪಿ ಘಟಕದ ಅಧ್ಯಕ್ಷ ಪ್ರವೀಣ್ ಡಿ.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕ ಜಗದೀಶ್ ಸ್ವಾಗತಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ ಅಮೀನ್ ಮಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.