ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಇಲಾಖೆ ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಕಾರ್ಯ ಮಾಡುತ್ತಿದೆ: ಸಚಿವ ಕೋಟ

ಕುಂದಾಪುರ: ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಇಲಾಖೆಯು ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದೆ. ರಾಜ್ಯದಲ್ಲಿನ 540 ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತೆಯ ಮಾನದಂಡದಲ್ಲಿ ಪೌರ ಕಾರ್ಮಿಕರು, ವಿಧವೆಯರು,ಕೋವಿಡ್‌ನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಈ ಶಾಲೆಯಲ್ಲಿ ಅವಕಾಶ ಕಲ್ಪಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ಹೆಣ್ಣು ಮಕ್ಕಳಿಗೆ ಓಬವ್ವ ಆತ್ಮ ರಕ್ಷಣೆ ತರಬೇತಿ ನೀಡಲಾಗಿದೆ. ಪದವಿ ವ್ಯಾಸಂಗ ಮಾಡಿದ ಪ.ಜಾತಿ ಮತ್ತು ಪಂಗಡದ 300 ಮಹಿಳೆಯರು ಸ್ವ ಉದ್ಯೋಗ ಆರಂಭಿಸಲು ಪ್ರತಿಷ್ಠಿತ ಕಂಪೆನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡು 6 ಕೋಟಿ ವೆಚ್ಚದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬೈಂದೂರು ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕಾರ್ಯಕರ್ತರ ಬೇಟಿ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಮಹತ್ತರ ಬದಲಾವಣೆಗಳಾಗಿವೆ. ರಾಜ್ಯದಲ್ಲಿ 2439 ಹಿಂದುಳಿದ ವರ್ಗದ ಹಾಸ್ಟೆಲ್‌ಗಳಿವೆ ಒಟ್ಟು ಎರಡು ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು 1.20 ಲಕ್ಷ ವಿದ್ಯಾರ್ಥಿಗಳು ಹೊರಗುಳಿದಿದ್ದಾರೆ.ಅವರ ಅನುಕೂಲಕ್ಕಾಗಿ ೨೫% ಹೆಚ್ಚು ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಆದೇಶ ನೀಡಲಾಗಿದೆ.ಇದರಿಂದ ಸುಮಾರು 31000 ವಿದ್ಯಾರ್ಥಿಗಳಿಗೆ ಮತ್ತಷ್ಟು ಅವಕಾಶ ದೊರೆಯುತ್ತದೆ. 250 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಡಿಗೆ ಕಟ್ಟಡದಲ್ಲಿ ಹೆಚ್ಚುವರಿ ಹಾಸ್ಟೆಲ್ ವ್ಯವಸ್ಥೆ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಾಡಿಕೊಡಲಾಗುವುದು ಎಂದರು.
ಸೆ.2 ರಂದು ದೇಶದ ಪ್ರಧಾನಿ ನರೇಂದ್ರ ಮೋದಿ ಸಾಗರಾಮಾಲಾ ಕಾರ್ಯಕ್ರಮಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದ ಯಶಸ್ವಿಗೆ ಕಾರ್ಯಕರ್ತರ ಸಂಘಟನೆ ಸಿದ್ಧತೆ ಕೂಡ ನಡೆಯುತ್ತಿದೆ ಎಂದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ವಿವಿಧ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜಡ್ಡು, ಪ್ರಿಯದರ್ಶಿನಿ ದೇವಾಡಿಗ ಇದ್ದರು.