ಪುತ್ತೂರು; ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ಅಗತ್ಯ- ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್
ಗಣೇಶೋತ್ಸವ ಕಾರ್ಯಕ್ರಮ ಹಿನ್ನೆಲೆ

ಪುತ್ತೂರು: ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಉತ್ಸವದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರು ಸ್ಥಳೀಯಾಡಳಿತ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದು ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಗಣೇಶೋತ್ಸವ ಹಬ್ಬಗಳ ಹಿನ್ನೆಲೆಯಲ್ಲಿ ಗುರುವಾರ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ಗಣೇಶೋತ್ಸವದ ಸಂದರ್ಭದಲ್ಲಿ ಬ್ಯಾನರ್, ಕಟೌಟ್‌ಗಳನ್ನು ಅಳವಡಿಸುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು. ಈ ನಿಟ್ಟಿನಲ್ಲಿ ಮುಂಚಿತವಾಗಿ ಸಂಬಂಧಿಸಿ ಸ್ಥಳೀಯಾಡಳಿತದಿಂದ ಅನುಮತಿ ಪಡೆದೇ ಬ್ಯಾನರ್ ಅಳವಡಿಸಬೇಕು ಎಂದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕವನ್ನು ಹೇಗೆ ಬಳಸಬೇಕು ಎಂಬುದಕ್ಕೆ ಸುಪ್ರೀಂಕೋರ್ಟ್ ಆದೇಶವಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಶಿಫಾರಸಿನಂತೆ ಕೇಂದ್ರ ಸರ್ಕಾರವೂ ಆದೇಶ ಹೊರಡಿಸಿದೆ. ವಿವಿಧ ಸಂದರ್ಭ ಹಾಗೂ ಧ್ವನಿವರ್ಧಕಗಳಲ್ಲಿ ಎಷ್ಟು ಪ್ರಮಾಣದ (ಡೆಸಿಬಲ್) ಶಬ್ದ ಹೊರಡಿಸಲು ಅನುಮತಿ ಇದೆ ಎಂಬ ಕೋಷ್ಠಕವೂ ಇದೆ. ಅದರ ಸೂಚನೆಯಂತೆ ಧ್ವನಿವರ್ಧಕ ಬಳಸಿ, ಡಿಜೆ ಸೌಂಡ್ಸ್‌ನ್ನು ನಿಯಂತ್ರಿಸಿ ಎಂದು ತಿಳಿಸಿದರು.
ಸಾರ್ವಜನಿಕ ಸುರಕ್ಷತೆ ಮತ್ತು ಪರಿಸರ ಮಾಲಿನ್ಯ ಉಂಟಾಗುವ ರೀತಿ ಕಾರ್ಯಕ್ರಮಗಳನ್ನು ಆಯೋಜಿಸ ಬಾರದು. ಅಗತ್ಯವಿರುವ ಕಡೆ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು. ವಿದ್ಯುತ್ ದೀಪಗಳನ್ನು ಅಳವಡಿಸುವ ಸಂದರ್ಭದಲ್ಲಿ ಪೆಂಡಾಲ್‌ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕೆಂದರು.
ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಮಾತನಾಡಿ ಉತ್ಸವ ಯಾವುದೇ ತೊಂದರೆ ಇಲ್ಲದೆ ನಡೆಯಬೇಕು. ಸಮಸ್ಯೆಗಳಿದ್ದಲ್ಲಿ ಮಾಹಿತಿ ನೀಡಿ ಎಂದರು. ಸಂಚಾರ ಪೊಲೀಸ್ ಠಾಣೆ ಎಸ್.ಐ ರಾಮ ನಾಯ್ಕ ಅವರು ಮಾತನಾಡಿ ಶೋಭಾಯಾತ್ರೆಯ ಸಂದರ್ಭ ವಾಹನ ಸಂಚಾರ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು. ಎಸ್.ಐ ಕುಟ್ಟಿ ಎಮ್.ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.