ಆ.29ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಚಾಲನೆ: ಸಚಿವ ಡಾ.ನಾರಾಯಣಗೌಡ

ಬೆಂಗಳೂರು, ಆ.26: ಗ್ರಾಮೀಣ ಪ್ರತಿಭೆಗಳ ಅನಾವರಣಗೊಳಿಸಲು ಹಾಗೂ ದೇಶಿಯ ಕ್ರೀಡೆಗಳ ಉತ್ತೇಜನಕ್ಕೆ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗುತ್ತಿದ್ದು, ಆ.29 ರಂದು ಮುಖ್ಯಮಂತ್ರಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ರಾಜ್ಯದ ಗ್ರಾಮೀಣ ಹಾಗೂ ದೇಶಿಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ದೇಸಿ ಕ್ರೀಡೆಗಳಾದ ಕುಸ್ತಿ, ಕಬ್ಬಡ್ಡಿ, ಖೋಖೋ ಮತ್ತು ಎತ್ತಿನಬಂಡಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ರಾಷ್ಟ್ರೀಯ ಕ್ರೀಡಾ ದಿನವಾದ ಆ.29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಗ್ರಾಮೀಣ ಕ್ರೀಡೋತ್ಸವ ಆಯೋಜಿಸಲಾಗುತ್ತಿದ್ದು, 10 ಕೋಟಿ ರೂ.ಅನುದಾನ ನೀಡಲಾಗಿದೆ. ದೇಶಿಯ ಕ್ರೀಡೆಗಳಿಗೆ, ಗ್ರಾಮೀಣ ಪ್ರತಿಭೆಗಳಿಗೆ ಉತ್ತೇಜನ ನೀಡಬೇಕು ಎಂಬುದು ನಮ್ಮ ಸರಕಾರದ ಆಶಯ ಎಂದು ನಾರಾಯಣಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು
ತಾಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಎಲೆ ಮರೆ ಕಾಯಿಯಂತಿದ್ದ ಎಷ್ಟೋ ಅರ್ಹ ಪ್ರತಿಭೆಗಳಿಗೆ ಅವಕಾಶ ಸಿಗಲಿದೆ. ಇದರಿಂದ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಲು ಅವಕಾಶ ದೊರೆಯುವಂತಾಗಲಿದೆ. ಹಾಗಾಗಿ ಗ್ರಾಮೀಣ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ನಾರಾಯಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







