ಅಂತಿಮ ಹಂತದ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಸೆ.2ರಂದು ಮಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್‌ಪಿಎಲ್‌ನ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮತ್ತು ನಗರದ ಗೋಲ್ಡ್‌ಫಿಂಚ್ ಮೈದಾನದಲ್ಲಿ ಏರ್ಪಡಿಸಲಾಗಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಸೆ.2ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಂತಿಮ ಅಂತದ ಸಿದ್ಧತೆಗಳನ್ನು ಸೂಕ್ತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲಾದ್ಯಂತ ಆಗಮಿಸುವ ಫಲಾನುಭವಿಗಳನ್ನು ಕರೆತರಲು ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳಿಗೆ ಊಟೋಪಚಾರ, ಕುಡಿಯುವ ನೀರಿನ ಪೂರೈಕೆ ಹಾಗೂ ಇತರೆ ಅಗತ್ಯಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುವಂತೆ ಸಚಿವರು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಎ.ವಿ. ರಮಣ, ಎಂಆರ್‌ಪಿಎಲ್ ನಿರ್ದೇಶಕ ವೆಂಕಟೇಶ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಪಂ ಸಿಇಒ ಡಾ. ಕುಮಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.