PUC- CET ಅಂಕ ಪರಿಗಣಿಸಿ ರ‍್ಯಾಂಕ್ ಪಟ್ಟಿ ಪ್ರಕಟಿಸಲು ಕೆಇಎಗೆ ಹೈಕೋರ್ಟ್ ಆದೇಶ

ಬೆಂಗಳೂರು, ಸೆ.3: ಪಿಯುಸಿ ಪರೀಕ್ಷೆಯಶೇ.50 ಅಂಕ ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದಿರುವ ಶೇ.50 ಅಂಕಗಳನ್ನು ಪರಿಗಣಿಸಿ ಹೊಸದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರ್ಯಾಂಕ್ ಪಟ್ಟಿ ಪ್ರಕಟಿಸಬೇಕೆಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಶನಿವಾರ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದ್ದು, ಎಲ್ಲ ವಿದ್ಯಾರ್ಥಿಗಳು ಪಿಯುಸಿಯಲ್ಲಿ ಪಡೆದ ಶೇ.50ರಷ್ಟು ಅಂಕಗಳು ಹಾಗೂ ಸಿಇಟಿಯಲ್ಲಿ ಪಡೆದ ಶೇ.50ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್ಯಾಂಕ್ ಪಟ್ಟಿಯನ್ನು ಕೆಇಎ ಪ್ರಕಟಿಸಬೇಕು ಎಂದು ಉಲ್ಲೇಖಿಸಲಾಗಿದೆ.
ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ. ಕೆಇಎ ಜು.30ರಂದು ಮಾಡಿದ್ದ ಆಕ್ಷೇಪಾರ್ಹವಾದ ಆದೇಶವನ್ನು ವಜಾ ಮಾಡಲಾಗಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.
2020-21ನೆ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್.ಈಶ್ವರ್ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಲಾಗಿದೆ.
ಪುನರಾವರ್ತಿತ ವಿದ್ಯಾರ್ಥಿಗಳ ದೃಷ್ಟಿಯಿಂದ ಸಿಇಟಿ-2022ರ ಮೌಲ್ಯಮಾಪನವು ತಾರತಮ್ಯದಿಂದ ಕೂಡಿದೆ. 2020-21ನೆ ಶೈಕ್ಷಣಿಕ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೆ ಸಾಲಿನಲ್ಲಿ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂಬ ಕೆಇಎ ಆದೇಶವು ಸ್ವೇಚ್ಛೆ, ಅತಾರ್ಕಿಕ ಮತ್ತು ವಿವೇಚನಾಯುತವಾಗಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.







