ಮಂಗಳೂರು: ‘ಪಂಪ ಮತ್ತು ಪರಿಸರ’ ಕೃತಿ ಬಿಡುಗಡೆ

ಮಂಗಳೂರು, ಸೆ.3: ಹುಟ್ಟಿನಿಂದ ಮನುಷ್ಯ ಶ್ರೇಷ್ಠನಾಗುವುದಿಲ್ಲ. ಆತನ ಬದುಕು ಭವಿಷ್ಯವನ್ನು ನಿರ್ಧರಿಸುತ್ತದೆ. ಲೌಕಿಕ ಸುಖಗಳ ಆಸೆ, ಆಕಾಂಕ್ಷೆ ಸಹಜ. ಆದರೆ ಅದೇ ಜೀವನವಾಗಬಾರದು ಎಂದು ಹಂಪಿ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ..ಬಿ ಎ ವಿವೇಕ್ ರೈ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಹಾಗು ನಗರದ ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ಸಂಘ ಮತ್ತು ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಹಂಪನಕಟ್ಟೆಯ ವಿವಿ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಶನಿವಾರ ‘ಪಂಪ ಮತ್ತು ಪರಿಸರ’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭ‘ಅತ್ಯುತ್ತಮ ಕುಲಪತಿ’ ಎಂಬ ರಾಷ್ಟ್ರೀಯ ಪ್ರಶಸ್ತಿ ಪಡೆದ ಪ್ರೊ.ಪಿ.ಎಸ್. ಯಡಪಡಿತ್ತಾಯ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿಗೆ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲೆ ಡಾ.ಅನಸೂಯ ರೈ, ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ ಹೊಂಗಳ್ಳಿ, ಕನ್ನಡ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾಧ್ಯಕ್ಷ ಎಂ.ಪಿ.ಶ್ರೀನಾಥ್, ವಿವಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ.ಸುಭಾಷಿಣಿ ಶ್ರೀವತ್ಸ, ವಿವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾಗಿದ್ದ ಡಾ.ರತ್ನಾವತಿ, ಪ್ರಸಾರಾಂಗದ ಸಹಾಯಕ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಹಾಗು ಕೃತಿಯ ಪ್ರಧಾನ ಸಂಪಾದಕ ಡಾ.ಮಾಧವ ಎಂ.ಕೆ. ಉಪಸ್ಥಿತರಿದ್ದರು.