ಸುಶಿಕ್ಷಿತ ಸಮಾಜ ಕಟ್ಟುವುದು ಶಿಕ್ಷಣ ಕ್ಷೇತ್ರದ ಜವಾಬ್ದಾರಿ: ಸಚಿವ ಕೋಟ

ಉಡುಪಿ, ಸೆ. 4: ಪ್ರಸ್ತುತ ಶಿಕ್ಷಣ ವ್ಯವಸ್ಥೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಶಿಕ್ಷಣದ ಗುಣಮಟ್ಟ ಉತ್ತಮವಾಗಿರಬೇಕು. ವಿದ್ಯಾರ್ಥಿಗಳಿಗೆ ವಸ್ತುನಿಷ್ಠ ವಿಷಯದ ಕುರಿತು ಪಾಠ ಪ್ರವಚನ ನಡೆದು ಸುಶಿಕ್ಷಿತ ಸಮಾಜ ಕಟ್ಟುವ ಕೆಲಸವನ್ನು ಶಿಕ್ಷಣ ಕ್ಷೇತ್ರ ಮಾಡಬೇಕು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿ ಆದರ್ಶ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ರವಿವಾರ ಆದರ್ಶ ಆಸ್ಪತ್ರೆಯಲ್ಲಿ ಆಯೋಜಿಸಲಾದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ಶಿಕ್ಷಕರು ಮತ್ತು ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಸಮಾರಂಭವನ್ನು ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿದರು. ಜಿಲ್ಲೆಯ 5 ವಲಯಗಳ ಪ್ರಾಥಮಿಕ, ಪ್ರೌಢಶಾಲೆ ವಿಭಾಗದ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳ 30 ಸಾಧಕ ಶಿಕ್ಷಕರಿಗೆ ‘ಆದರ್ಶ ಶಿಕ್ಷಕ ಪ್ರಶಸ್ತಿ’ಯನ್ನು ಸಚಿವರು ಪ್ರದಾನ ಮಾಡಿದರು.
ಮಾಹೆ ವಿ.ವಿ. ಅಂತಾರಾಷ್ಟ್ರೀಯ ಸಹಯೋಗದ ನಿರ್ದೇಶಕ ಡಾ. ಕರುಣಾ ಕರ್ ಕೋಟೆಕಾರ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಕಾಂತ್ ರಾವ್ ಸಿದ್ದಾಪುರ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಆಸ್ಪತ್ರೆಯ ಸಿಇಒ ವಿಮಲಾ ಚಂದ್ರಶೇಖರ್ ಉಪಸ್ಥಿತರಿದ್ದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಅನುಶ್ರೀ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಆಸ್ಪತ್ರೆಯ ಅಸಿಸ್ಟೆಂಟ್ ಮ್ಯಾನೇಜರ್ ಪ್ರಕಾಶ್ ಡಿ.ಕೆ. ವಂದಿಸಿದರು.







