ಲಖಿಂಪುರಖೇರಿ ಪ್ರಕರಣ: ಉ.ಪ್ರ. ಸರಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಹೊಸದಿಲ್ಲಿ, ಸೆ. 6: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತಂತೆ ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರಪ್ರದೇಶ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ.
ಜಾಮೀನು ಅರ್ಜಿ ತಿರಸ್ಕರಿಸಿ ಅಲಹಾಬಾದ್ ಉಚ್ಚ ನ್ಯಾಯಾಲಯ ಜುಲೈ 26ರಂದು ನೀಡಿದ ಆದೇಶ ಪ್ರಶ್ನಿಸಿ ಆಶಿಶ್ ಮಿಶ್ರಾ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಎಂ.ಎಂ. ಸುಂದರೇಶ್ ಅವರನ್ನು ಒಳಗೊಂಡ ಪೀಠ ಪರಿಗಣಿಸಿದೆ. ಅಲ್ಲದೆ, ಸೆಪ್ಟಂಬರ್ 26ರ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಉತ್ತರಪ್ರದೇಶ ಸರಕಾರಕ್ಕೆ ಸೂಚಿಸಿದೆ.
ಲಖಿಂಪುರಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ 2021 ಅಕ್ಟೋಬರ್ 3ರಂದು ನಡೆದ ಘಟನೆಯ ಹತ್ಯೆ ಪ್ರಕರಣವನ್ನು ಆಶಿಶ್ ಮಿಶ್ರಾ ಎದುರಿಸುತ್ತಿದ್ದಾರೆ. ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಆಶಿಶ್ ಮಿಶ್ರಾ ಕಾರು ಹರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಶಿಶ್ ಮಿಶ್ರಾನನ್ನು 2022 ಅಕ್ಟೋಬರ್ 9ರಂದು ಬಂಧಿಸಲಾಗಿತ್ತು. 2022 ಫೆಬ್ರವರಿಯಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು.







