'ಭಾರತ ಐಕ್ಯತಾ ಯಾತ್ರೆ'ಯಿಂದ ಬಿಜೆಪಿ ಸುಳ್ಳಿನ ಕಾರ್ಖಾನೆ ಛಿದ್ರ: ಕೆ.ಸಿ.ವೇಣುಗೋಪಾಲ್
''ಸರಕಾರದ ವಿರುದ್ಧ ಧ್ವನಿ ಎತ್ತಿದ ಹಲವರನ್ನು ಬಂಧಿಸಲಾಗಿದೆ''
ಬೆಂಗಳೂರು, ಸೆ.23: ಕಳೆದ 10 ವರ್ಷಗಳಿಂದ ಬಿಜೆಪಿ ಹಾಗೂ ಸಂಘ ಪರಿವಾರ ರಾಹುಲ್ ಗಾಂಧಿ ಅವರ ಘನತೆ ಹಾಳು ಮಾಡಲು ಪ್ರಯತ್ನಿಸುತ್ತಿದೆ. ಈಗ ಜನರಿಗೆ ರಾಹುಲ್ ಗಾಂಧಿ ಯಾರು ಎಂದು ಅರ್ಥವಾಗುತ್ತಿದೆ. ಈ ಯಾತ್ರೆಯಿಂದ ಬಿಜೆಪಿ ಸುಳ್ಳಿನ ಕಾರ್ಖಾನೆ ಛಿದ್ರವಾಗಲಿದೆ ಎಂಬ ಸತ್ಯ ಅವರಿಗೆ ಗೊತ್ತಾಗಿದೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದರು.
ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಭಾರತ ಐಕ್ಯತಾ ಯಾತ್ರೆಯ ಸಿದ್ಧತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ರಾಜ್ಯ ನಾಯಕರು ಮಾಡಿರುವ ಎಲ್ಲ ಸಿದ್ಧತೆಗಳು ಎಐಸಿಸಿಗೆ ತೃಪ್ತಿ ತಂದಿದೆ. ರಾಜ್ಯದಲ್ಲಿನ ಯಾತ್ರೆ ಅತ್ಯಂತ ಯಶಸ್ವಿಯಾಗಲಿದೆ ಎಂದರು.
ಸೆ.7ರಂದು ಕನ್ಯಾಕುಮಾರಿಯಲ್ಲಿ ಈ ಯಾತ್ರೆ ಆರಂಭವಾಗಿದ್ದು, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಎಲ್ಲ ವರ್ಗದಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭ್ಯವಾಗಿದೆ. ನಮ್ಮ ನಿರೀಕ್ಷೆ ಮೀರಿ ಲಕ್ಷಾಂತರ ಜನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರ ಜತೆ ಜನಸಾಮಾನ್ಯರೂ ಕುಟುಂಬ ಸಮೇತವಾಗಿ ಭಾಗವಹಿಸುತ್ತಿರುವುದು ಈ ಯಾತ್ರೆಯನ್ನು ಜನ ಒಪ್ಪಿರುವುದಕ್ಕೆ ಸಾಕ್ಷಿ ಎಂದು ವೇಣುಗೋಪಾಲ್ ಹೇಳಿದರು.
ರಾಹುಲ್ ಗಾಂಧಿ ಜನಸಾಮಾನ್ಯರು ಹಾಗೂ ಅವರ ಸಮಸ್ಯೆ ಬಗ್ಗೆ ಹೆಚ್ಚು ಚಿಂತಿತರಾಗಿದ್ದು, ನಿರುದ್ಯೋಗ, ಬೆಲೆ ಏರಿಕೆ, ರೈತರ ಸಂಕಷ್ಟ, ಸಾಮಾಜಿಕ ಸಾಮರಸ್ಯದ ಬಗ್ಗೆ ಧ್ವನಿಯಾಗಿದ್ದಾರೆ. ಆರ್ಥಿಕ, ಸಾಮಾಜಿಕ ಅಸಮಾನತೆ, ರಾಜಕೀಯ ದ್ವೇಷದ ವಿಚಾರವಾಗಿ ಈ ಯಾತ್ರೆ ಮಾಡಲಾಗುತ್ತಿದೆ. ರಾಹುಲ್ ಯಾವ ಟಿ ಶರ್ಟ್, ಚಡ್ಡಿ ಹಾಕಿದರೆ ಬಿಜೆಪಿ ಅವರಿಗೆ ಏನು ಸಮಸ್ಯೆ? ದೇಶದ ರಾಜಕೀಯ ಇತಿಹಾಸದಲ್ಲಿ ಈ ಯಾತ್ರೆ ಒಂದು ತಿರುವು ನೀಡಲಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದೆ. ಸೆ.30ರವರೆಗೂ ನಾಮಪತ್ರ ಸಲ್ಲಿಕೆ ಮಾಡಬಹುದು. ಕಾಂಗ್ರೆಸ್ ಪಕ್ಷ ಮಾತ್ರ ತನ್ನ ಅಧ್ಯಕ್ಷರನ್ನು ಪ್ರಜಾಪ್ರಭುತ್ವ ಆಧಾರದ ಮೇಲೆ ಆರಿಸಲಿದೆ. ಎಲ್ಲ ಮಾಧ್ಯಮಗಳು ಈ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಿವೆ. ಅ.19ರಂದು ನೂತನ ಅಧ್ಯಕ್ಷ ಆಯ್ಕೆ ಆಗಲಿದ್ದು, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ನೂತನ ಅಧ್ಯಕ್ಷರ ನಾಯಕತ್ವದಲ್ಲಿ ಸಾಗಲಿದ್ದಾರೆ ಎಂದು ವೇಣುಗೋಪಾಲ್ ತಿಳಿಸಿದರು.
ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕು ಎಂದು ಕಾಂಗ್ರೆಸಿಗರು ಬಯಸುತ್ತಿದ್ದಾರೆ ಎಂದು ಕೇಳಿದಾಗ, ರಾಹುಲ್ ಗಾಂಧಿ ಮುಂದಾಳತ್ವ ವಹಿಸಿ ನಿತ್ಯ 25 ಕಿ.ಮೀ ಸರಾಸರಿಯಲ್ಲಿ 150 ದಿನ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವ ನಾಯಕ ಇಂತಹ ಪಾದಯಾತ್ರೆ ಮಾಡಲು ಸಾಧ್ಯ? ಎಂದರು.
‘ಪೇ ಸಿಎಂ’ ಅಭಿಯಾನ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ವೇಣುಗೋಪಾಲ್, ಈ ಅಭಿಯಾನ ಆರಂಭಿಸಿರುವುದು ಕಾಂಗ್ರೆಸ್ ಪಕ್ಷ ಅಲ್ಲ. ಇದು ಜನರ ಸಮಸ್ಯೆಗೆ ಧ್ವನಿಯಾಗಿ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಈ ಸರಕಾರ ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರಕಾರ ಎಂದು ಜನ ಹೇಳುತ್ತಿದ್ದಾರೆ. ಇದು ಬಿಜೆಪಿ ಚಿಂತೆಗೀಡು ಮಾಡಿದೆ. ಸರಕಾರದ ವಿರುದ್ಧ ಧ್ವನಿ ಎತ್ತಿದ ಹಲವರನ್ನು ದೇಶಾದ್ಯಂತ ಬಂಧಿಸಲಾಗಿದೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ. ಅವರು ಭಾಗವಹಿಸಲಿರುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು.
ರಾಜ್ಯದಲ್ಲಿ ಈ ಯಾತ್ರೆ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ.2ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು. ಬಳ್ಳಾರಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ಶಿವಕುಮಾರ್ ತಿಳಿಸಿದರು.
ರಾಹುಲ್ ಗಾಂಧಿ ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದ ದಿನ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಹೇಳಿದರು.
ನಾಗರಿಕ ಸಮಾಜದ ಗಣ್ಯರು, ಕಲಾವಿದರೂ, ಕೈಗಾರಿಕೋದ್ಯಮಿಗಳು, ಚಿಂತಕರು ಸೇರಿದಂತೆ ಪ್ರಮುಖರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಯಾತ್ರೆ ಮಾರ್ಗದಲ್ಲಿ ಮೈಸೂರು ಜನರು ಬೆಳಗ್ಗೆ 7 ಗಂಟೆಗೆ ರಾಹುಲ್ ಗಾಂಧಿ ಜತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಶಿವಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.