ಸದ್ಯಕ್ಕೆ ಹಾಲಿನ ದರ ಏರಿಕೆ ಇಲ್ಲ
ಸಾಂದರ್ಭಿಕ ಚಿತ್ರ
ಬೆಂಗಳೂರು,ಸೆ. 26: ಜನಸಾಮಾನ್ಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡಬೇಕೆಂಬ ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳ(ಕೆಎಂಎಫ್) ಬೇಡಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆಂದು ಗೊತ್ತಾಗಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಸಂಕಷ್ಟದಲ್ಲಿದ್ದು, ಇಂತಹ ಸ್ಥಿತಿಯಲ್ಲಿ ಹಾಲಿನ ದರ ಏರಿಕೆ ಸಮಂಜಸವಲ್ಲ. ಈ ಸಂದರ್ಭದಲ್ಲಿ ನಂದಿನಿ ಹಾಲಿನ ದರ ಏರಿಕೆ ಮಾಡಿದರೆ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಹೀಗಾಗಿ ಸದ್ಯಕ್ಕೆ ಈಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಂಡಳಿಯ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಪ್ರತಿ ಲೀ.ಹಾಲಿಗೆ 3 ರೂ.ದರ ಹೆಚ್ಚಳ ಮಾಡಿದರೆ ಗ್ರಾಹಕರಿಗೆ ಹೊರೆಯಾಗುತ್ತದೆ. ಈಗಿನ ಸಂದರ್ಭದಲ್ಲಿ ಕೆಎಂಎಫ್ ಪ್ರಸ್ತಾವನೆಯನ್ನು ಒಪ್ಪಿಕೊಳ್ಳುವುದು ಬೇಡ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಸೂಕ್ತ ನಿರ್ಧಾರವನ್ನು ಸರಕಾರ ಕೈಗೊಳ್ಳಲಿದೆ. ತೆಗೆದುಕೊಳ್ಳಲಿದೆ. ಹೆಚ್ಚಿನ ಪ್ರಮಾಣದಲ್ಲಿ ಹಾಲಿನ ಉತ್ಪನ್ನಗಳ ಮಾರಾಟಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದ್ದಾರೆಂದು ಗೊತ್ತಾಗಿದೆ.