ಪ್ರವಾಸೋದ್ಯಮದ ಉತ್ತೇಜನಕ್ಕೆ ಹಲವು ಕ್ರಮ: ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಸೆ.27: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರಾವಳಿ ಉತ್ಸವ ಸಹಿತ ಹಲವು ಯೋಜನೆಗಳನ್ನು ರೂಪಿಸಲಾಗುವುದು. ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ಕರಾವಳಿ ಉತ್ಸವ ನಡೆಸಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.
ದ.ಕ. ಜಿಲ್ಲಾಡಳಿತ, ಮಂಗಳೂರು ಸ್ಮಾರ್ಟ್ ಸಿಟಿ, ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ನಗರ ಹೊರವಲಯದ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಮಂಗಳವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶಗಳಿವೆ. ಅದರಲ್ಲಿ ಬೀಚ್ ಪ್ರವಾಸೋದ್ಯಮ ಪ್ರಮುಖವಾದದು, ಟೆಂಪಲ್ ಟೂರಿಸಂ, ಪಶ್ಚಿಮ ಘಟ್ಟ, ನದಿಗಳು, ಸಮುದ್ರ ಅರಣ್ಯ ಸಹಿತಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಪ್ರವಾಸೋದ್ಯಮವನ್ನು ವಿಸ್ತರಿಸಬಹುದಾಗಿದೆ. ಆ ಹಿನ್ನೆಲೆಯಲ್ಲಿ ಸಸಿಹಿತ್ಲು, ಸುರತ್ಕಲ್, ಪಣಂಬೂರು, ಸೋಮೇಶ್ವರ, ಉಲ್ಲಾಳದ ಕಡಲ ಕಿನಾರೆಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಜಿಲ್ಲಾ ಪ್ರವಾಸೋದ್ಯಮ ಸಮಿತಿಯಿಂದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಡಾ.ರಾಜೇಂದ್ರ ಹೇಳಿದರು.
ಪಣಂಬೂರು ಬೀಚನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಟೆಂಡರ್ ಕರೆಯಲಾಗಿದೆ. ಪಣಂಬೂರನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು ಉಳಿದ ಬೀಚ್‌ಗಳ ಅಭಿವೃದ್ಧಿಗೆ ಉದ್ದೇಶಿಸಲಾಗಿದೆ. ಸಸಿಹಿತ್ಲುವಿನಲ್ಲಿ 29 ಎಕರೆ ಡೀಮ್ಡ್ ಫಾರೆಸ್ಟ್ ಜಾಗದಲ್ಲಿ ಜಂಗಲ್ ಲಾಡ್ಜ್ ಸಹಿತ ಇಕೋ ಟೂರಿಸಂ ಯೋಜನೆ ಟೆಂಡರ್ ಹಂತದಲ್ಲಿದೆ. ಸ್ಥಳೀಯ ಭಾವನೆಗಳಿಗೆ ದಕ್ಕೆಯಾಗದಂತೆ, ಸುರಕ್ಷತೆಗೆ ಒತ್ತು ನೀಡಿ ರಾತ್ರಿ ಪ್ರವಾಸೋದ್ಯಮ ವನ್ನೂ ಆರಂಭಿಸಲು ಯೋಚಿಸಲಾಗಿದೆ ಎಂದರು.
ಶಾಸಕ ಡಾ. ಭರತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್ ಉಪಸ್ಥಿತರಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ವೈ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ ಸ್ವಾಗತಿಸಿದರು. ಉಪನ್ಯಾಸಕ ಉಮೇಶ್ ಕೆ.ಆರ್. ವಂದಿಸಿದರು.