ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಸ್ವಯಂ ಜಾಗೃತಿ ಅಗತ್ಯ: ಕೃಷ್ಣ ಮೂರ್ತಿ

ಪುಂಜಾಲಕಟ್ಟೆ : ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಲು ಸ್ವಯಂ ಜಾಗೃತಿ ಅಗತ್ಯ ಎಂದು ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿ ತಿಳಿಸಿದ್ದಾರೆ.
ದ.ಕ.ಜಿಲ್ಲಾಡಳಿತ, ದ.ಕ. ಜಿಪಂ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘ ಮತ್ತು ಪಿಲಾತಬೆಟ್ಟು ಗ್ರಾಪಂ ಸಹಭಾಗಿತ್ವದಲ್ಲಿ ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜಾಗೃತಿ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಸುವಿಧ ಸಹಕಾರಿ ಭವನ ಪುಂಜಾಲಕಟ್ಟೆ ಸಭಾಂಗಣದಲ್ಲಿ ಶನಿವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪ್ಲಾಸ್ಟಿಕ್ ಮಣ್ಣಿನಲ್ಲಿ ಸೇರಲು 250 ಕ್ಕೂ ಹೆಚ್ಚು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಅಷ್ಟು ದೀರ್ಘ ಕಾಲ ಪರಿಸರದಲ್ಲಿ ಸೇರಿ ಹೋಗದೆ ಮನುಷ್ಯರ ಸಹಿತ ಎಲ್ಲಾ ಜೀವಿಗಳ ಜೈವಿಕ ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿಯೂ ಸ್ವಯಂ ಜಾಗೃತಿ ಮೂಡಿದಾಗ ಸಾಮೂಹಿಕ ಪ್ರಯತ್ನ ಸಾಧ್ಯ. ಪರಿಸರ ಮಾಲಿನ್ಯ ತಡೆಯಲು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಸಂಘಟನೆಗಳ ಜೊತೆ ಪತ್ರಕರ್ತರು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಕೃಷ್ಣ ಮೂರ್ತಿ ಹೇಳಿದರು.
ಅತಿಥಿಗಳಾಗಿ ಮಂಗಳೂರು ಅರಣ್ಯ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ಭಾಗವಹಿಸಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.
ಪಿಲಾತಬೆಟ್ಟು ಗ್ರಾಪಂ ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಜಿಪಂ ಮಾಜಿ ಸದಸ್ಯ ತುಂಗಪ್ಪಬಂಗೇರ, ಪಿಲಾತಬೆಟ್ಟು ಗ್ರಾಪಂ ಉಪಾಧ್ಯಕ್ಷ ಲಕ್ಷ್ಮಿನಾರಾಯಣ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ್ ವಿಶ್ವ ಕರ್ಮ ವಂದಿಸಿದರು.
*ಕಾರ್ಯಕ್ರಮದಲ್ಲಿ ಸ್ಥಳೀಯರು 85.350 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ತಂದಿದ್ದರು. ಅವರಿಗೆ 400 ಕೆ.ಜಿ.ಅಕ್ಕಿ ವಿತರಿಸಲಾಯಿತು. ಅಕ್ಕಿಯನ್ನು ಕೊಡುಗೆಯಾಗಿ ನೀಡಿದ ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆಯವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಪಿಲಾತಬೆಟ್ಟು ಗ್ರಾಪಂ ಅಭಿವೃದ್ಧಿ ಅಧಿಕಾರಿ ಯಮಪ್ಪಕೊರವ ಸ್ವಚ್ಛತಾ ಪ್ರಮಾಣ ವಚನ ಬೋಧಿಸಿದರು.