ರಾಜ್ಯದ 13 ಜಿಲ್ಲೆಗಳಲ್ಲಿ ತಲಾ 5 ಕೋಟಿ ರೂ. ವೆಚ್ಚದಲ್ಲಿ ರಂಗಮಂದಿರ: ಸಚಿವ ಸುನಿಲ್ ಕುಮಾರ್

ಉಡುಪಿ, ಅ.2: ಉಡುಪಿ ಮತ್ತು ಮಂಗಳೂರು ಸೇರಿದಂತೆ ರಾಜ್ಯದ ಒಟ್ಟು 13 ಜಿಲ್ಲಾ ಕೇಂದ್ರಗಳಲ್ಲಿ ರಂಗ ಮಂದಿರಗಳ ಕೊರತೆ ಇದ್ದು, ಈ ಕೊರತೆಯನ್ನು ನೀಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊಸ ಸೂತ್ರ ರಚಿಸಿದ್ದು, ಅದರಂತೆ ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ 5 ಕೋಟಿ ರೂ. ಮತ್ತು ತಾಲೂಕು ರಂಗ ಮಂದಿರಗಳ ನಿರ್ಮಾಣಕ್ಕೆ 2 ಕೋಟಿ ರೂ. ನೀಡುವ ತೀರ್ಮಾನ ಮಾಡಲಾಗಿದೆ. ಅದರಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸುಸಜ್ಜಿತ ರಂಗ ಮಂದಿರಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ನಗರದ ಆದಿಉಡುಪಿಯಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವ ಉಡುಪಿ ಜಿಲ್ಲಾ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು. ಇದೇ ರೀತಿ ಮಂಗಳೂರಿಗೂ ಐದು ಕೋಟಿ ರೂ.ಅನುದಾನ ನೀಡಲಾಗಿದೆ ಎಂದರು.
ಪ್ರಸ್ತುತ ಉಡುಪಿ ಜಿಲ್ಲೆಗೆ ಹಲವು ವರ್ಷಗಳ ಬೇಡಿಕೆಯಾಗಿದ್ದ ರಂಗಮಂದಿರ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.5 ಕೋಟಿ ರೂ.ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ಹಂತದಲ್ಲಿ ಮತ್ತೆ 2.5ಕೋಟಿ ರೂ.ವನ್ನು ಬಿಡುಗಡೆ ಮಾಡಲಾಗುವುದು. ಶೀಘ್ರದಲ್ಲಿ ಕಾಮಗಾರಿ ಮುಕ್ತಾಯಗೊಂಡು ಇಲ್ಲಿ ಕಲಾ ಚಟುವಟಿಕೆಗಳು ನಿರಂತರವಾಗಿ ನಡೆಯುವಂತಾಗಬೇಕು ಎಂದವರು ಆಶಿಸಿ ದರು.
ಡಿಸೆಂಬರ್ ತಿಂಗಳಲ್ಲಿ ಮಸೂದೆಗೆ ಒಪ್ಪಿಗೆ: ಮುಂದಿನ ತಿಂಗಳು ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ ಕೂಡ ‘ಮಾತಾಡು ಮಾತಾಡು ಕನ್ನಡ’ ಕಾರ್ಯಕ್ರಮ ಅಭಿಯಾನವನ್ನು ರಾಜ್ಯಾದ್ಯಂತ ನಡೆಸಲು ತಯಾರಿ ಪ್ರಕ್ರಿಯೆ ನಡೆಯುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಆದ್ಯತೆ ದೊರೆಯಬೇಕೆಂಬ ಉದ್ದೇಶದಿಂದ ಹೊಸ ಮಸೂದೆಯನ್ನು ವಿಧಾನಸಭೆಯಲ್ಲಿ ಈಗಾಗಲೇ ಮಂಡಿಸಲಾಗಿದೆ. ಅದರ ಸಾಧಕ ಭಾದಕಗಳ ಬಗ್ಗೆ 2 ತಿಂಗಳ ಚರ್ಚೆ ನಡೆಸಿ, ಮುಂದಿನ ಡಿಸೆಂಬರ್ ಅಧಿವೇಶನದಲ್ಲಿ ವಿಧಾನಮಂಡಲದ ಎರಡೂ ಸದನಗಳಲ್ಲಿ ಇದಕ್ಕೆ ಮಂಜೂರಾತಿ ಪಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಸುನಿಲ್ ನುಡಿದರು.
ಉಡುಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.
ತೆರೆಮರೆಯ ಸಾಧಕರಿಗೆ ರಾಜ್ಯೋತ್ಸವ ಪ್ರಶಸಿ
ಈ ಬಾರಿಯ ರಾಜ್ಯಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಶಸ್ತಿ ಆಯ್ಕೆ ಸಮಿತಿಯ ಮೂಲಕ ತೆರೆಮರೆಯಲ್ಲಿದ್ದು ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಅವರಿಗೆ ನೀಡಲು ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ಕುಮಾರ್ ತಿಳಿಸಿದರು.
ಆದರೂ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 9823 ಅರ್ಜಿಗಳು ಬಂದಿವೆ. ರಾಜ್ಯಮಟ್ಟದ ಪ್ರಶಸ್ತಿಯ ಮಾನದಂಡವನ್ನು ಈ ಮೊದಲೇ ಪ್ರಕಟಿಸಿರುವುದರಿಂದ ಹೆಚ್ಚು ಬೆಳಕಿಗೆ ಬರದ ತೆರೆಮರೆಯ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು, ಈಗಾಗಲೇ ಆಯ್ಕೆ ಸಮಿತಿಯನ್ನು ರಚಿಸಿದ್ದು, ಅದರ ಪ್ರಥಮ ಹಂತದ ಸಭೆ ಕೂಡಾ ಮುಗಿದಿದೆ. ಆದಷ್ಟು ಶೀಘ್ರದಲ್ಲಿ ಅರ್ಹ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದವರು ತಿಳಿಸಿದರು.







