ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ವಿಧಾನಮಂಡಲದ ಉಭಯ ಸದನಗಳ ನಾಯಕರ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಸಿಎಂ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಎರಡೂ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾಗಮೋಹನ ದಾಸ್ ಆಯೋಗ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಸಮಿತಿಗಳ ಶಿಫಾರಸುಗಳನ್ನೂ ಒಪ್ಪಿಕೊಳ್ಳಲಾಗಿದೆ ಎಂದು ಸಿಎಂ ವಿವರಿಸಿದರು.
ಸಂಪುಟ ಸಭೆಯಲ್ಲಿ ವರದಿಯನ್ನು ಒಪ್ಪಿಕೊಂಡು ವಿಧಾನಮಂಡಲದ ಡಿಸೆಂಬರ್ ಅಧಿವೇಶನದಲ್ಲಿ ಮಂಡಿಸಲಾಗುವುದು. ಅಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಎಸ್.ಸಿ ಮತ್ತು ಎಸ್.ಟಿ ಮೀಸಲಾತಿ ಹೆಚ್ಚಳದಿಂದ ಇತರ ಯಾವುದೇ ಸಮುದಾಯಗಳ ಮೀಸಲಾತಿ ಕಡಿತವಾಗುವುದಿಲ್ಲ. ಎಲ್ಲ ಸಮುದಾಯಗಳ ಮೀಸಲಾತಿ ಪ್ರಮಾಣ ಈಗಿನಂತೆ ಮುಂದುವರಿಯಲಿದೆ. ಎಸ್.ಸಿ ಮತ್ತು ಎಸ್.ಟಿ ಸಮುದಾಯಗಳ ಮೀಸಲಾತಿ ಪ್ರಮಾಣ ಮಾತ್ರ ಹೆಚ್ಚಳವಾಗಲಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.







