ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಬೆಂಗಳೂರು, ಅ.10: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಹಲವೆಡೆ ಐದು ದಿನ ಮಳೆ ಮುಂದುವಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ (heavy rain) ಎಂದು ಹವಮಾನ ಇಲಾಖೆ ತಿಳಿಸಿದೆ.
ಯಾದಗಿರಿ, ರಾಯಚೂರು, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯದ ಪರಿಣಾಮದಿಂದ ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ವರ್ಷಧಾರೆಯಾಗಲಾರಂಭಿಸಿದೆ.
ಶಿವಮೊಗ್ಗ ನಗರ ಹಾಗೂ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದು ಬೆಳಿಗ್ಗೆಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಳ್ಳುವಂತಾಗಿದೆ. ಬೆಳಿಗ್ಗೆ ಮಳೆಯಿಂದ ಕೆಲಸಕಾರ್ಯಕ್ಕೆ ತೆರಳುವವರಿಗೆ ಅನಾನುಕೂಲವಾಗಿ ಪರಿಣಮಿಸಿದೆ.
ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆಯು ಇದೀಗ ಮತ್ತೆ ಆರಂಭವಾಗಿರುವುದು ನಾಗರಿಕರಿಗೆ ತಲೆನೋವು ತಂದಿದೆ. ಕರ್ನಾಟಕಕ್ಕೆ ಈ ವಾರದಲ್ಲಿ ಹಿಂಗಾರು ಮಳೆ ಪ್ರವೇಶವಾಗಲಿದ್ದು, ಅಲ್ಲಿಯವರೆಗೆ ಮಳೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಮಳೆಯಾಗಲಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರಿದಿದೆ. ಸಂಜೆಯ ವೇಳೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.