ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತೇನೆ: ನಟಿ ಭಾವನಾ
ಚಿತ್ರದುರ್ಗ, ಅ.11: 'ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಬಾರಿ ಕಾಂಗ್ರೆಸ್‌ನಿಂದ ನಾನು ಟಿಕೆಟ್ ಕೇಳುತ್ತೇನೆ. ಜನರ ಸೇವೆಗಾಗಿ ಚುನಾವಣೆಗೆ ನಿಲ್ಲುತ್ತೇನೆ' ಎಂದು ಕನ್ನಡದ ಖ್ಯಾತ ನಟಿ ಭಾವನಾ ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆ ಪ್ರವೇಶಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ 'ಭಾರತ್ ಜೋಡೊ' ಯಾತ್ರೆಯಲ್ಲಿ ಭಾಗವಹಿಸಿದ ನಟಿ ಭಾವನಾ, ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ''ಇನ್ನೂ ಅವಕಾಶ ಕೇಳಿಲ್ಲ. ಆದರೆ ಅತಿ ಶೀಘ್ರದಲ್ಲಿ ಕೇಳ್ತೀನಿ ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಹುಲ್‌ಗಾಂಧಿ ಸಮನಾದ ವ್ಯಕ್ತಿ'' ಎಂದು ಹೇಳಿದ್ದಾರೆ.
2018ರಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್‍ನಲ್ಲಿನ ಕೆಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದ ನಟಿ ಭಾವನಾ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ.
ಇದನ್ನೂ ಓದಿ: ಸುರ್ಜೇವಾಲಾ ಸಮ್ಮುಖದಲ್ಲಿ ಮತ್ತೆ ಕಾಂಗ್ರೆಸ್ ಸೇರಿದ ನಟಿ ಭಾವನಾ