24 ಗಂಟೆಗಳಲ್ಲಿ FIR ಮಾಹಿತಿ ವೆಬ್ಸೈಟ್ನಲ್ಲಿ ಹಾಕಲು ಕೋರಿಕೆ: ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಅ.18: ಲೋಕಾಯುಕ್ತ ಪೊಲೀಸರು ದಾಖಲಿಸಿದ ‘ಪ್ರಥಮ ವರ್ತಮಾನ ವರದಿ’ಯನ್ನು(ಎಫ್ಐಆರ್) 24 ಗಂಟೆಗಳಲ್ಲಿ ವೆಬ್ಸೈಟ್ನಲ್ಲಿ ಪ್ರಕಟಿಸುವ ಸಂಬಂಧ ಲೋಕಾಯುಕ್ತಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಹಿನ್ನೆಲೆಯಲ್ಲಿ ಹೈಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ನಗರದ ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಅವರಿದ್ದ ವಿಭಾಗೀಯ ನ್ಯಾಯಪೀಠ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಲೋಕಾಯುಕ್ತ ಎಡಿಜಿಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಎಫ್ಐಆರ್ ದಾಖಲಾದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಅದನ್ನು ವೆಬ್ಸೈಟ್ನಲ್ಲಿ ಪ್ರಕಟಿಸಬೇಕೆಂದು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಲೋಕಾಯುಕ್ತ ಪೊಲೀಸರು ಪಾಲಿಸುತ್ತಿಲ್ಲ. ಈ ಕುರಿತು ಅರ್ಜಿದಾರರು 2022ರ ಸೆ.19ರಂದು ದೂರು ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಎಫ್ಐಆರ್ ಅನ್ನು 24 ಗಂಟೆಗಳಲ್ಲಿ ವೆಬ್ಸೈಟ್ನಲ್ಲಿ ಪ್ರಕಟಿಸಿದರೆ ದೂರುದಾರರು, ಕಕ್ಷಿದಾರರು ಮತ್ತು ವಕೀಲರಿಗೆ ಸಾಕಷ್ಟು ಅನುಕೂಲವಾಗುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.