ಖರ್ಗೆ ಆಯ್ಕೆಯಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.19: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದರಿಂದ ನಮ್ಮ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ. ಪಕ್ಷಕ್ಕೆ ನಿಷ್ಠರಾಗಿ ಶ್ರಮಿಸಿದರೆ ಯಾವ ಹಂತದವರೆಗೂ ಬೇಕಾದರೂ ಬೆಳೆಯಬಹುದು ಎಂಬುದಕ್ಕೆ ಖರ್ಗೆ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ನಿಷ್ಠೆ, ಸಮಾಜ, ಹಿರಿತನ, ಪ್ರಜಾಪ್ರಭುತ್ವ ವ್ಯವಸ್ಥೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ ರಾಜ್ಯಕ್ಕೆ ಸಿಕ್ಕಿರುವುದು ಶಕ್ತಿಯಲ್ಲವೇ? ಕೇವಲ ರಾಜ್ಯ ಅಥವಾ ದಕ್ಷಿಣ ಭಾರತಕ್ಕೆ ಮಾತ್ರವಲ್ಲ ಅಖಂಡ ಭಾರತಕ್ಕೆ ಖರ್ಗೆಯವರ ಆಯ್ಕೆಯಿಂದ ಶಕ್ತಿ ಬರುತ್ತದೆ’ ಎಂದರು.
24 ವರ್ಷಗಳ ನಂತರ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಸೋನಿಯಾ ಗಾಂಧಿ ಬಹಳ ಕಷ್ಟಕಾಲದಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡು, ಯುಪಿಎ ಸರಕಾರ ಅಸ್ತಿತ್ವಕ್ಕೆ ಬಂದು 10 ವರ್ಷ ಆಳ್ವಿಕೆಗೆ ಕಾರಣರಾಗಿದ್ದರು. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹಿನ್ನಡೆ ಅನುಭವಿಸಿದಾಗ ರಾಹುಲ್ ಗಾಂಧಿ ನೈತಿಕ ಹೊಣೆ ಹೊತ್ತು ಅಧ್ಯಕ್ಷ ಸ್ಥಾನ ತ್ಯಜಿಸಿದ್ದರು ಎಂದು ಅವರು ಹೇಳಿದರು.
ಎಸ್.ನಿಜಲಿಂಗಪ್ಪ ನಂತರ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗರು ಆಯ್ಕೆಯಾಗಿರುವುದು ನಮ್ಮ ಪಾಲಿಗೆ ಭಾಗ್ಯ. ಖರ್ಗೆ ಸುಮಾರು 50 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಶಾಸಕ, ಸಚಿವ, ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕ, ಲೋಕಸಭೆ ಸದಸ್ಯ, ಕೇಂದ್ರ ಸಚಿವ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಈಗ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.
ಖರ್ಗೆ ಅವರು ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಆಗಿರುತ್ತಾರೆಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯಲ್ಲಿ ನಡ್ಡಾ ಅವರನ್ನು ಏನೆಂದು ಕರೆಯಬೇಕು. ಅವರು ಚುನಾವಣೆಯಲ್ಲಿ ಗೆದ್ದಿದ್ದಾರಾ? ಅಮಿತ್ ಶಾ ಯಾವ ರಾಜ್ಯದವರು? ಹೇಗೆ ಆಯ್ಕೆಯಾದರು? ಖರ್ಗೆ ಅವರಿಗೆ ಅವರದೇ ಆದ ಅನುಭವವಿದೆ ಎಂದರು.
ಗಾಂಧಿ ಕುಟುಂಬದ ಅನುಭವಗಳ ಆಧಾರದಲ್ಲಿ ಕೆಲವು ಸಂದರ್ಭದಲ್ಲಿ ಸಲಹೆ ಪಡೆಯಬೇಕಾಗುತ್ತದೆ. ನಾನು ಕೆಲವು ಸಂದರ್ಭಗಳಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಅಲ್ಲಂ ವೀರಭದ್ರಪ್ಪ, ದೇಶಪಾಂಡೆ, ವೀರಪ್ಪ ಮೋಯ್ಲಿ, ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರ ಅಭಿಪ್ರಾಯ ಪಡೆಯುತ್ತೇನೆ ಎಂದು ಅವರು ಹೇಳಿದರು.
ಸಂಭ್ರಮಾಚರಣೆ: ‘ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಪಕ್ಷ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.







