ಉಡುಪಿ ಜಿಲ್ಲೆಯಲ್ಲಿ ನ.16-17ರಂದು ಬಿಜೆಪಿ ‘ಜನಸಂಕಲ್ಪ ಯಾತ್ರೆ’

ಉಡುಪಿ, ಅ. 20: ಬಿಜೆಪಿಯ ಮಹತ್ವಾಕಾಂಕ್ಷಿ ‘ಜನಸಂಕಲ್ಪ ಯಾತ್ರೆ’ಯು ಜಿಲ್ಲೆಯ ಬೈಂದೂರು ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.16 ಮತ್ತು 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಅ.29ರಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ರಾಜ್ಯದಲ್ಲೇ ವಿನೂತನವಾಗಿ ಜಿಲ್ಲೆಯ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಶಕ್ತಿಕೇಂದ್ರಗಳ ಸಭೆಗಳು ಯಶಸ್ವಿಯಾಗಿ ನಡೆಯು ತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ 242 ಶಕ್ತಿಕೇಂದ್ರಗಳಲ್ಲಿ 2 ತಿಂಗಳಿಗೊಮ್ಮೆ ನಿರಂತರ ಸಭೆಗಳು ನಡೆಯಲಿವೆ ಎಂದವರು ತಿಳಿಸಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಅಡಿಕೆ ಕೃಷಿಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶದಿಂದ ಸಾವಿಗೀಡಾದ ಪಕ್ಷದ ಹಿರಿಯ ಮುಖಂಡ, ಶೀರೂರು ಶಕ್ತಿಕೇಂದ್ರದ ಅಧ್ಯಕ್ಷ ಸತೀಶ್ ಪ್ರಭು ಶೀರೂರು ಇವರ ಅಕಾಲಿಕ ನಿಧನದ ಬಗ್ಗೆ ಸಭೆಯಲ್ಲಿ ಮೌನ ಪ್ರಾರ್ಥನೆಯೊಂದಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಎಸ್. ಕಲ್ಮಾಡಿ, ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್‌ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







