ಉಡುಪಿ ಜಿಲ್ಲೆ: 2ಲಕ್ಷ ಜನರಿಂದ ಕೋಟಿ ಕಂಠ ಗಾಯನ
► ಸಮುದ್ರ ಮಧ್ಯೆ ಮೊಳಗಿದ ಕನ್ನಡ ಗೀತೆಗಳು ► 145 ಬೋಟುಗಳು ಭಾಗಿ

ಉಡುಪಿ, ಅ.28: ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಬಹಳಷ್ಟು ಸಂಭ್ರಮ ಹಾಗೂ ಉತ್ಸಾಹದಿಂದ ಅತ್ಯಂತ ವಿಶಿಷ್ಠವಾಗಿ ಆಚರಿಸುವ ನಿಟ್ಟಿನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿರುವ ಏಕಕಂಠದಲ್ಲಿ ಆಯ್ದ ಆರು ಕನ್ನಡ ಗೀತೆಗಳನ್ನು ಹಾಡುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ.
ಮಲ್ಪೆಯ ಸಮುದ್ರ ಮಧ್ಯೆ ಸುಮಾರು 145 ಪರ್ಸಿನ್ ಬೋಟುಗಳಲ್ಲಿ ಮೀನುಗಾರರು ಸೇರಿದಂತೆ 4000ಕ್ಕೂ ಅಧಿಕ ಮಂದಿ ಕನ್ನಡ ಗೀತೆಗಳ ಗಾಯನ ಕಾಯಕ್ರಮದಲ್ಲಿ ಭಾಗಿಯಾದರು. ಬೋಟಿನಲ್ಲಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಕನ್ನಡ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಮತ್ತು ದ.ಕ. ಮೀನು ಮಾರಾಟ ಫೆಡರೇಷನ್ ಆಧ್ಯಕ್ಷ ಯಶ್‌ಪಾಲ್ ಸುವರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು, ಮೀನು ಗಾರಿಕಾ ಸಂಘಟನೆಗಳ ಪ್ರತಿನಿಧಿಗಳು ಹಾಜರಿದ್ದರು.
ಕನ್ನಡ ಬಾವುಟದಿಂದ ಅಲಂಕರಿಸಿದ ಬೋಟುಗಳಲ್ಲಿ ಮೀನುಗಾರರು, ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಂಗೀತ ಕಲಾವಿದರೊಂದಿಗೆ ಹಾಡುಗಳನ್ನು ಹಾಡಿದರು. ಇದೇ ವೇಳೆ ಜಿಲ್ಲಾಧಿಕಾರಿ ಕನ್ನಡ ಗೀತೆಗಳಿಗೆ ನೃತ್ಯ ಮಾಡಿ ಸಂಭ್ರಮಿಸಿದರು.
ವಿವಿಧೆಡೆ ಕೋಟಿ ಕಂಠ ಗಾಯನ
ಮಣಿಪಾಲ ಗ್ರೀನ್ಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ 5000ಕ್ಕೂ ಹೆಚ್ಚು ಮಂದಿ ವೈದ್ಯರು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಬಿಳಿ ಕೋಟ್ ಹಾಗೂ ಸ್ಕೆತೋಸ್ಕೋಪ್ ಧರಿಸಿ ಭಾಗವಹಿಸಿದರು. ಇವರೊಂದಿಗೆ ಶಾಸಕ ರಘುಪತಿ ಭಟ್ ಜೊತೆಯಾದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಬ್ಯಾಂಡ್‌ನೊಂದಿಗೆ 5000 ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಲೀಡ್ ಕಾಲೇಜು ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ 3000 ಮಂದಿ ಕಾರ್ಮಿಕರೊಂದಿಗೆ ನಡೆದ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದರು. ಅಪರ ಜಿಲ್ಲಾದಿಕಾರಿ ವೀಣಾ ಬಿ.ಎನ್. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಪಾಲ್ಗೊಂಡರು.
ಸೈಂಟ್ ಮೇರಿಸ್ ದ್ವೀಪ
ಉಡುಪಿ ನಗರಸಭೆ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಜರಗಿತು. ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಸಭೆಯ ಸದಸ್ಯರುಗಳು, ಪೌರಾಯುಕ್ತ ಉದಯ ಕುಮಾರ್ ಶೆಟ್ಟಿ, ನಗರಸಭೆಯ ಸಿಬ್ಬಂದಿ ಭಾಗವಹಿಸಿದ್ದರು.
ನಿಟ್ಟೆ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಬೀಡನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಕಟ್ಟಡ ಕಾರ್ಮಿಕರು, ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಿಟ್ಟೂರಿನ ಸರಕಾರಿ ರಾಜ್ಯ ಮಹಿಳಾ ನಿಲಯ, ಕಾರ್ಕಳದ ಅತ್ತೂರು ಚರ್ಚ್, ಚತುರ್ಮುಖ ಬಸದಿ, ಗೊಮ್ಮಟಬೆಟ್ಟು, ಆನೆಕೆರೆ ಬಸದಿ, ವರಂಗ ಬಸದಿ, ಕಾಪು ಜೂನಿಯರ್ ಕಾಲೇಜು ಮೈದಾನ, ಬಂಟಕಲ್ ಇಂಜಿನಿಯರ್ ಕಾಲೇಜು, ಕುಂದಾಪುರ ಜೂನಿಯರ್ ಕಾಲೇಜು ಮೈದಾನ, ಬೈಂದೂರು ಗಾಂಧೀ ಮೈದಾನ, ಜಿಲ್ಲೆಯ ಎಲ್ಲಾ 155 ಗ್ರಾಪಂ ವ್ಯಾಪ್ತಿಯಲ್ಲಿ, ಗ್ರಂಥಾಲಯ ಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ರೈಲ್ವೆ ನಿಲ್ದಾಣ, ಆಟೋ ನಿಲ್ದಾಣ, ಬಸ್ ನಿಲ್ದಾಣ, ಧಾರ್ಮಿಕ ಕೇಂದ್ರಗಳಲ್ಲಿ, ಬ್ಯಾಂಕ್, ಎಲ್‌ಐಸಿ ಕಚೇರಿಗಳಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಕೋಟಿಕಂಠ ಗಾಯನ ಕಾರ್ಯಕ್ರಮದಲ್ಲಿ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂನತ ವಿದ್ಯಾ ಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳ ಗಾಯನ ಹಾಗೂ ಕನ್ನಡ ಭಾಷೆಯನ್ನು ಉಳಿಸಿ ಬೆಳಸುವ ಕುರಿತು ಸಂಕಲ್ಪ ವಿಧಿ ಸ್ವೀಕಾರ ಕಾರ್ಯ ಕ್ರಮ ನಡೆಯಿತು.
"ಕೋಟಿ ಕಂಠ ಗಾಯನ ಕಾರ್ಯಕ್ರಮವು ಉಡುಪಿ ಜಿಲ್ಲೆಯಲ್ಲಿ ಅದ್ಭುತವಾಗಿ ಮೂಡಿಬಂದಿದೆ. ಮಲ್ಪೆ ಸಮುದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೆ. ಅಭೂತಪೂರ್ವ ಅನುಭವ ದೊರೆಯಿತು. 100ಕ್ಕೂ ಹೆಚ್ಚು ಬೋಟುಗಳಲ್ಲಿ ಮೀನುಗಾರರು ಹಾಗೂ ಸಾರ್ವಜನಿಕರು ಸೇರಿ ಕನ್ನಡ ಗೀತೆಗಳನ್ನು ಹಾಡಿದರು. ಈ ಕಾರ್ಯಕ್ರಮದಿಂದ ಜಿಲ್ಲೆಯಾದ್ಯಂತ ಸಂಭ್ರಮದ ವಾತಾವರಣ ಕಂಡುಬಂದಿದೆ".
-ಕೂರ್ಮಾರಾವ್, ಉಡುಪಿ ಜಿಲ್ಲಾಧಿಕಾರಿ










