ನಾಳೆಯಿಂದ (ನ.1) JDS ಪಂಚರತ್ನ ರಥಯಾತ್ರೆ ಆರಂಭ: ಕುಮಾರಸ್ವಾಮಿ

ಬೆಂಗಳೂರು, ಅ.31: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆ ಶ್ರೀ ಗಣಪತಿ ದೇವಾಲಯದಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ನ.1ರ ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮಾಜಿ ಸಚಿವರು, ಎಲ್ಲ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: ಎಚ್.ಡಿ. ಕುಮಾರಸ್ವಾಮಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯ
ಪಂಚ ಯೋಜನೆಗಳ ಪಂಚರತ್ನ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಪಕ್ಷವು, ಸ್ವಂತ ಶಕ್ತಿಯ ಮೇಲೆ ಸರಕಾರ ರಚಿಸಬೇಕೆಂಬ ಉದ್ದೇಶ ಹೊಂದಿದೆ. ಇದಕ್ಕಾಗಿ ಪಂಚರತ್ನ ಯಾತ್ರೆ ಹೆಸರಿನಲ್ಲಿ ಚುನಾವಣಾ ಪ್ರಚಾರವನ್ನು ಕೈಗೊಳ್ಳುತ್ತಿದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
‘ಪಂಚರತ್ನ ರಥಯಾತ್ರೆ: ನವ ಕರ್ನಾಟಕ ನಿರ್ಮಾಣಕ್ಕಾಗಿ ಮಹಾಯಾತ್ರೆ' ಹೆಸರಿನಲ್ಲಿ ಈ ರಥಯಾತ್ರೆ ಕೈಗೊಳ್ಳಲಾಗುತ್ತಿದೆ. ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಪಂಚರತ್ನ ಪರಿಪೂರ್ಣ ಪರಿಹಾರ ಎಂದು ಬಿಂಬಿಸಲಾಗುತ್ತಿದೆ. ಶಿಕ್ಷಣವೆ ಆಧುನಿಕ ಶಕ್ತಿ, ಆರೋಗ್ಯ ಸಂಪತ್ತು, ಕೃಷಿ ಚೈತನ್ಯ, ಯುವ ನವಮಾರ್ಗ ಮತ್ತು ಮಹಿಳಾ ಸಬಲೀಕರಣ ಹಾಗೂ ವಸತಿ ಆಸರೆ ಪಂಚರತ್ನ ಯೋಜನೆಗಳಾಗಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಈ ಐದು ಅಂಶಗಳೇ ಪ್ರಮುಖ ಯೋಜನೆಗಳಾಗಿರುತ್ತವೆ ಎಂದು ಅವರು ಹೇಳಿದ್ದಾರೆ.
ಪಂಚರತ್ನ ರಥಯಾತ್ರೆ; ನವಕರ್ನಾಟಕ ನಿರ್ಮಾಣಕ್ಕಾಗಿ ಮಹಾಯಾತ್ರೆ..
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 31, 2022
ನಾಳೆಯಿಂದ ಮುಳಬಾಗಿಲು ತಾಲೂಕಿನ ಕುರುಡುಮಲೆ ಶ್ರೀ ಗಣಪತಿ ಸನ್ನಿಧಿಯಿಂದ ಶುಭಾರಂಭ.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನಗಳೇ ಪರಿಹಾರ.
ಬನ್ನಿ, ಕನ್ನಡಿಗರೆಲ್ಲರೂ ಒಗ್ಗೂಡಿ ಅಭಿವೃದ್ಧಿಯತ್ತ ಹೆಜ್ಜೆಗಳನ್ನು ಹಾಕೋಣ.@JanataDal_S #ಪಂಚರತ್ನ_ರಥಯಾತ್ರೆ pic.twitter.com/VX6xdbMqLW







