ನ್ಯಾಯಾಲಯದ ತೀರ್ಪಿನ ಬಗ್ಗೆ ಗೊಂದಲ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಯು.ಟಿ ಖಾದರ್ ಆಗ್ರಹ
ಮಳಲಿಪೇಟೆ ಮಸೀದಿ ಪ್ರಕರಣ

ಮಂಗಳೂರು: ಮಳಲಿಪೇಟೆ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು 3ನೆ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ಬಗ್ಗೆ ಸಾಮಾಜಿಕ ಜಾಲತಾಣಗಳ ಸಹಿತ ಇತರ ಮಾಧ್ಯಮಗಳಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಜರಗಿಸಬೇಕು ಎಂದು ಮಾಜಿ ಸಚಿವ ಹಾಗೂ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ವಕ್ಫ್ ಸೊತ್ತಿಗೆ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್ ನ್ಯಾಯಾಲಯದಲ್ಲಿ ಕಲಾಪ ನಡೆಸಬಹುದು ಎಂದು ನ್ಯಾಯಾಲಯ ತೀರ್ಪು ನೀಡಿದೆಯೇ ವಿನಃ ಬೇರೆ ಯಾವುದೇ ತೀರ್ಪನ್ನು ನೀಡಿಲ್ಲ. ಆದರೆ ಕೆಲವು ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರು ಈ ತೀರ್ಪಿಗೆ ಸಂಬಂಧಿಸಿ ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಗೊಂದಲ ಸೃಷ್ಟಿಸುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುವ ಸಾಧ್ಯತೆ ಇದೆ. ಹಾಗಾಗಿ ಇಂತಹ ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆಯು ಗಂಭೀರವಾಗಿ ಪರಿಗಣಿಸಬೇಕು. ಗೊಂದಲ ಸೃಷ್ಟಿಸಿ ಅಶಾಂತಿಯ ವಾತಾವರಣ ನಿರ್ಮಿಸುವವರ ವಿರುದ್ಧ ಕ್ರಮ ಜರಗಿಸಬೇಕು ಎಂದು ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.
ನಾಡಿನ ಜನತೆ ಸಮಾಜದಲ್ಲಿ ನೆಮ್ಮದಿಯ ಜೀವನ ನಡೆಸಲು ಬಯಸುತ್ತಿದ್ದಾರೆ. ಪ್ರೀತಿ, ವಿಶ್ವಾಸ, ಸೌಹಾರ್ದಕ್ಕೆ ಹಂಬಲಿಸುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ಇಂತಹ ವಿಚಾರಗಳನ್ನು ದುರ್ಬಳಕೆ ಮಾಡುವುದು ಸರಿಯಲ್ಲ. ನ್ಯಾಯಾಲಯದ ತೀರ್ಪನ್ನು ತಪ್ಪಾಗಿ ಉಲ್ಲೇಖಿಸಿ ತಪ್ಪು ಸಂದೇಶ ರವಾನಿಸುವುದು ದೇಶದ್ರೋಹದ ಕೆಲಸವಾಗಿದೆ. ಶಾಂತಿಪ್ರಿಯ ಜನತೆ ಈ ಗೊಂದಲಮಯ ಹೇಳಿಕೆಗೆ ಕಿವಿಕೊಡದೆ ವಾಸ್ತವ ಸಂಗತಿ ಅರ್ಥ ಮಾಡಿಕೊಳ್ಳಬೇಕು ಎಂದು ಯು.ಟಿ.ಖಾದರ್ ಮನವಿ ಮಾಡಿದ್ದಾರೆ.