ಉಡುಪಿ: ನ.15ರಂದು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

ಉಡುಪಿ, ನ.10: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಮತ್ತು ರಾಜಾರಾಮ್ ಮೋಹನ್ ರಾಯ್ ಗ್ರಂಥಾಲಯ ಪ್ರತಿಷ್ಠಾನ ಕೋಲ್ಕತ್ತಾ ಇವರ ಸಂಯುಕ್ತ ಆಶ್ರಯದಲ್ಲಿ ಆಧುನಿಕ ಭಾರತದ ಪಿತಾಮಹ ರಾಜಾರಾಮ್ ಮೋಹನ್‌ರಾಯ್ ಅವರ ಜನ್ಮ ದಿನೋತ್ಸವ ಪ್ರಯುಕ್ತ ಮಹಿಳಾ ಸಬಲೀಕರಣದ ಕುರಿತು ವಿದ್ಯಾರ್ಥಿಗಳಿಂದ ಜಾಥಾ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಡಿಜಿಟಲ್ ಸದಸ್ಯತ್ವ ಅಭಿಯಾನ ಉತ್ತಮ ಸಿಬ್ಬಂದಿ/ ಉತ್ತಮ ಓದುಗ ಸೇವಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭ ನ.15ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಪುರಭವನದ ಬಳಿ ಇರುವ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 8:30ಕ್ಕೆ ಉಡುಪಿ ಸರ್ವಿಸ್ ಬಸ್‌ನಿಲ್ದಾಣದ ಬಳಿ ಇರುವ ಬೋರ್ಡ್ ಹೈಸ್ಕೂಲ್ ಮೈದಾನದಿಂದ ಡಯಾನಾ ಸರ್ಕಲ್, ತಾಲೂಕು ಕಚೇರಿ ಮಾರ್ಗವಾಗಿ ಅಜ್ಜರಕಾಡು ಜಿಲ್ಲಾ ಕೇಂದ್ರ ಗ್ರಂಥಾಲಯದವರೆಗೆ ನಡೆಯುವ ಜಾಥಾ ಹಾಗೂ ಸಭಾ ಕಾರ್ಯಕ್ರಮ ವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಜಿಲ್ಲಾಧಿ ಕಾರಿ ಕೂರ್ಮಾರಾವ್ ಎಂ, ಜಿಪಂ ಸಿಇಓ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್ ಹೊಸಮನಿ ಭಾಗವಹಿಸಲಿದ್ದಾರೆ.







