ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣ ಸೇರಿಂದತೆ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದರು.
ದಿಲ್ಲಿಯಿಂದ ವಿಶೇಷ ವಿಮಾನದಲ್ಲಿ ಬೆಳಿಗ್ಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಸೇರಿದಂತೆ ಇತರ ಗಣ್ಯ ವ್ಯಕ್ತಿಗಳು ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಾಗೆಯೇ, ಸಂಚಾರ ವ್ಯವಸ್ತೆಯಲ್ಲೂ ಕೆಲವೊಂದು ಮಾರ್ಪಾಡುಗಳನ್ನು ಮಾಡಲಾಗಿದೆ.
ಇದನ್ನೂ ಓದಿ... 'ಪ್ರತಿ ತಿಂಗಳು ಮೋದಿ ಬೆಂಗಳೂರಿಗೆ ಬರಲಿ' ಎಂದು ಆಗ್ರಹಿಸಿ ಚಳವಳಿ ನಡೆಸಿದ ಆಪ್ ಮುಖಂಡರ ಬಂಧನ
ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ವಿಧಾನಸೌಧದ ಶಾಸಕರ ಭವನಕ್ಕೆ ಆಗಮಿಸಲಿರುವ ಪ್ರಧಾನಿ, ಶಾಸಕರ ಭವನದ ಅವರಣದಲ್ಲಿರುವ ಸಂತ ಶ್ರೇಷ್ಠ ಕನಕದಾಸ ಹಾಗೂ ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಲಿದ್ದಾರೆ.
ಅಲ್ಲಿಂದ ನೇರವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ, ವಂದೇ ಮಾತರಂ ಮತ್ತು ಭಾರತ್ ಗೌರವ್ ಕಾಶಿದರ್ಶನ್ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರುವರು. ರೈಲು ನಿಲ್ದಾಣದಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ತೆರಳಿ ಅಲ್ಲಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್ನ್ನು ಉದ್ಘಾಟಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವರು. ಇದಾದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ.