ಟ್ವೆಂಟಿ-20 ವಿಶ್ವಕಪ್: ಇಂಗ್ಲೆಂಡ್ ಚಾಂಪಿಯನ್
ಫೈನಲ್ ನಲ್ಲಿ ಪಾಕಿಸ್ತಾನದ ವಿರುದ್ಧ ಜಯ, ಸ್ಟೋಕ್ಸ್ ಅರ್ಧಶತಕ
ಮೆಲ್ಬೋರ್ನ್: ಆಲ್ ರೌಂಡರ್ ಬೆನ್ ಸ್ಟೋಕ್ಸ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ಕ್ರಿಕೆಟ್ ತಂಡ ಟ್ವೆಂಟಿ-20 ವಿಶ್ವಕಪ್ ಫೈನಲ್ ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್ ಗಳ ಅಂತರದಿಂದ ಮಣಿಸಿದೆ. ಈ ಮೂಲಕ ಎರಡನೇ ಬಾರಿ ಟ್ವೆಂಟಿ-20 ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಈ ಹಿಂದೆ 2010ರಲ್ಲಿ ಇಂಗ್ಲೆಂಡ್ ಟ್ವೆಂಟಿ-20 ಚಾಂಪಿಯನ್ ಆಗಿತ್ತು.
ರವಿವಾರ ನಡೆದ ಪಂದ್ಯದಲ್ಲಿ ಗೆಲ್ಲಲು 138 ರನ್ ಗುರಿ ಪಡೆದಿದ್ದ ಇಂಗ್ಲೆಂಡ್ 19 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿತು.
ಇಂಗ್ಲೆಂಡ್ ಪರ ಸ್ಟೋಕ್ಸ್ (ಔಟಾಗದೆ 52,49 ಎಸೆತ, 5 ಬೌಂಡರಿ, 1 ಸಿಕ್ಸರ್) ಅಗ್ರ ಸ್ಕೋರರ್ ಎನಿಸಿಕೊಂಡರು. ನಾಯಕ ಜೋಸ್ ಬಟ್ಲರ್(26 ರನ್), ಹ್ಯಾರಿ ಬ್ರೂಕ್(20 ರನ್), ಮೊಯಿನ್ ಅಲಿ(19 ರನ್) ಎರಡಂಕೆಯ ಸ್ಕೋರ್ ಗಳಿಸಿದರು.
ಪಾಕ್ ಬೌಲಿಂಗ್ ನಲ್ಲಿ ಹಾರಿಸ್ ರವೂಫ್ (2-23)ಎರಡು ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಪಾಕ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿತು.