ದ.ಕ.ಜಿಲ್ಲಾ ಪೊಲೀಸ್ ಕ್ರೀಡಾಕೂಟ

ಮಂಗಳೂರು: ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಪಾಂಡೇಶ್ವರದಲ್ಲಿರುವ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಪೊಲೀಸ್ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಬಂಟ್ವಾಳ ಮತ್ತು ಪುತ್ತೂರು ಪೊಲೀಸ್ ಉಪವಿಭಾಗ ವ್ಯಾಪ್ತಿಯ ಠಾಣೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.
ದಿನವಿಡೀ ಸಮವಸ್ತ್ರ ಧರಿಸಿ ಕರ್ತವ್ಯದಲ್ಲಿರುವ ಪೊಲೀಸರು ಮಂಗಳವಾರ ಕ್ರೀಡೆಯಲ್ಲಿ ಭಾಗವಹಿಸಿ, ಒತ್ತಡದಿಂದ ಮುಕ್ತರಾದರು. ದಿನವಿಡೀ ಉತ್ಸಾಹದಿಂದ ಕಳೆದರು. ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಶಾಟ್‌ಪುಟ್, ವಾಲಿಬಾಲ್, ಹಗ್ಗಜಗ್ಗಾಟ ಮತ್ತಿತರ ಸ್ಪರ್ಧೆಗಳು ನಡೆಯಿತು.
ಕ್ರೀಡಾಕೂಟವನ್ನು ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪಾರಿವಾಳ ಹಾರಿ ಬಿಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಾನಸಿಕ ಮತ್ತು ಶಾರೀರಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಅಗತ್ಯವಿದೆ. ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಒತ್ತಡದ ಕೆಲಸವಿರುತ್ತದೆ. ಕ್ರೀಡೆಯಂತಹ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸ್ವಲ್ಪ ಒತ್ತಡ ಕಡಿಮೆ ಮಾಡಿಕೊಳ್ಳಬಹುದು ಎಂದರು.
ದ.ಕ.ಜಿಪಂ ಸಿಇಒ ಡಾ. ಕುಮಾರ್ ಮಾತನಾಡಿ, ದಿನಕ್ಕೆ ಒಂದು ಗಂಟೆಯನ್ನಾದರೂ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಸಮಯ ಮೀಸಲಿಡುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ದ.ಕ.ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಭಾಗವಹಿಸಿದ್ದರು.