ನ.19: ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ
ಅಗತ್ಯ ಸಿದ್ಧತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆಯು ನ.19ರಂದು ನಡೆಯಲಿದ್ದು, ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೆದಂಬಾಡಿ ರಾಮಯ್ಯ ಗೌಡರ ಕಂಚಿಮ ಪ್ರತಿಮೆಯ ಲೋಕಾರ್ಪಣೆ ಕುರಿತಂತೆ ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದ.ಕ.ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ನ.19ರಂದು ನಗರದ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ.
ಮುಖ್ಯಮಂತ್ರಿ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು, ಕನಿಷ್ಟ 25,000 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಮಾಡಿ ಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.