ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ದಾಳಿ
ಕಾರಿನ ಮುಂಭಾಗದಲ್ಲಿ ಮದುವೆಯ ದಿಬ್ಬಣದ ಪೋಸ್ಟ್ ಹಾಕಿದ್ದ ಅಧಿಕಾರಿಗಳು!
ಚಿಕ್ಕಮಗಳೂರು, ನ.17: ಕಾಂಗ್ರೆಸ್ ನಾಯಕಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಗುರುವಾರ ಮುಂಜಾನೆ ಐಟಿ (IT raid) ದಾಳಿ ನಡೆದಿದೆ.
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಶಾಂತೇಗೌಡ ಅವರ ನಿವಾಸಕ್ಕೆ ಇಂದು ಮುಂಜಾನೆ ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ಐಟಿ ಅಧಿಕಾರಿಗಳು ತಮ್ಮ ಕಾರಿನ ಮುಂಭಾಗದಲ್ಲಿ 'ಅಭಿನವ್ ವೆಡ್ಸ್ ದೀಪಿಕಾ' ಎಂದು ಮದುವೆಯ ಬೋರ್ಡ್ ಹಾಕಿಕೊಂಡು ಈ ಕಾರ್ಯಾಚರಣೆ ನಡೆಸಿದ್ದಾರೆ.
ಶಾಂತೇಗೌಡ ಅವರ ಅಳಿಯ, ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಸಂತೋಷ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿಸಿದ್ದಾರೆ.
ವಿಧಾನ ಪರಿಷತ್ ಮಾಜಿ ಸದಸ್ಯೆಯಾಗಿರುವ ಗಾಯತ್ರಿ ಶಾಂತೇಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಗೆ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೇ ಕಾರಣಕ್ಕೆ ಈ ಐಟಿ ದಾಳಿ ನಡೆದಿದೆ. ಇದರ ಹಿಂದೆ ಬಿಜೆಪಿ ಮುಖಂಡ ಸಿ.ಟಿ.ರವಿ ಹುನ್ನಾರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.