ಕಾಡಾನೆ ದಾಳಿಯಿಂದ ಮಹಿಳೆ ಮೃತ್ಯು: ಮೃತದೇಹ ಇಟ್ಟು ಗ್ರಾಮಸ್ಥರಿಂದ ಧರಣಿ
ಅರಣ್ಯಾಧಿಕಾರಿ, ಜನಪ್ರತಿನಿಧಿಗಳ ವಿರುದ್ಧ ವ್ಯಾಪಕ ಆಕ್ರೋಶ
ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಮಹಿಳೆ ಸಂಬಂಧಿಕರು ಹಾಗೂ ಗ್ರಾಮಸ್ಥರು ಮಹಿಳೆಯ ಶವ ಇಟ್ಟು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ರವಿವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ಮಹಿಳೆ ಶೋಭಾ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಹಾಗೂ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು, ಕಾಫಿ ಬೆಳೆಗಾರರು, ರೈತ ಮುಖಂಡರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ಮೃತ ಮಹಿಳೆಯ ಶವ ಮುಂದಿಟ್ಟುಕೊಂಡು ಸರಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನರು, ಕಾಡಾನೆ ದಾಳಿಗಳಿಗೆ ರಾಜ್ಯ ಸರಕಾರ, ಅರಣ್ಯ ಇಲಾಖೆಯೇ ಹೊಣೆ ಎಂದು ಆರೋಪಿಸಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬರಬೇಕೆಂದು ಪಟ್ಟ ಹಿಡಿದರು.
ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರಾದರೂ ಜನರ ಆಕ್ರೋಶ ಕಡಿಮೆಯಾಗಲಿಲ್ಲ. ಘಟನೆ ನಡೆದು ಸುಮಾರು 2 ಗಂಟೆ ಬಳಿಕ ಸ್ಥಳಕ್ಕೆ ಚಿಕ್ಕಮಗಳೂರು ಅರಣ್ಯ ವಿಭಾಗದ ಡಿಎಫ್‍ಒ ಕ್ರಾಂತಿ ತೆರಳಿದ್ದು, ಇದರಿಂದ ಮತ್ತಷ್ಟು ಆಕ್ರೋಶಗೊಂಡ ಗ್ರಾಮಸ್ಥರು ಅಧಿಕಾರಿ ವಿರುದ್ಧ ಅಸಮಾಧಾನ್ಯ ವ್ಯಕ್ತಪಡಿಸಿದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಈ ವೇಳೆ ಮಾತನಾಡಿದ ಮುಖಂಡರು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಕಾಡಾನೆಗಳ ದಾಳಿಗೆ ಕೊನೆ ಇಲ್ಲದಂತಾಗಿದೆ. ಕಾಡಾನೆಗಳ ದಾಳಿಗೆ ತಿಂಗಳಿಗೊಬ್ಬರು ಸಾಯುತ್ತಿದ್ದಾರೆ. ರೈತರು ಆನೆ ಹಾವಳಿಯಿಂದ ಬೆಳೆ ಕಳೆದುಕೊಳ್ಳುತ್ತಿರುವುದಲ್ಲದೇ ಪ್ರಾಣವನ್ನೂ ಕಳೆದುಕೊಂಡು ಆತಂಕದಲ್ಲೇ ಬದುಕುವಂತಾಗಿದೆ. ಕಾಡಾನೆಗಳ ನಿಯಂತ್ರಣ, ಸ್ಥಳಾಂತರಕ್ಕೆ ಕ್ರಮವಹಿಸುವುದಾಗಿ ಸರಕಾರ ಹಾಗೂ ಜನಪ್ರತಿನಿಧಿಗಳಿಂದ ಕೇವಲ ಭರವಸೆ ಸಿಗುತ್ತಿದೆಯೇ ಹೊರತು ಅದು ಕಾರ್ಯಗತಕ್ಕೆ ಬರುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿಯಿಂದ ನೊಂದ ಗ್ರಾಮಸ್ಥರ ಜೀವದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಮೃತ ಮಹಿಳೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಆನೆ ಹಾವಳಿ ನಿಯಂತ್ರಣ ಹಾಗೂ ಆನೆಗಳ ಸ್ಥಳಾಂತರಕ್ಕೆ ಸರಕಾರದೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸರಕಾರ ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿ ಧರಣಿ ಕೈಬಿಟ್ಟರು. ಈ ವೇಳೆ ಮೂಡಿಗೆರೆ, ಆಲ್ದೂರು ಠಾಣೆಯ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದರು.