ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ
ಬೆಂಗಳೂರು ಒಂದರಿಂದ 8ನೇ ತರಗತಿಯ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಲಾಗಿದೆ ಎಂದು ಇತ್ತೀಚಿಗೆ ಕೆಲವರು ಗೊಂದಲ ಸೃಷ್ಟಿಸುತ್ತಿರುವ ಬಗ್ಗೆ ಸೋಮವಾರ ಸ್ಪಷ್ಟನೆ ನೀಡಿದ ಅವರು, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮ ಸಂಪೂರ್ಣವಾಗಿ ರಾಜ್ಯ ವಲಯದ ಯೋಜನೆಯಾಗಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆಯು ಈ ಹಿಂದಿನಂತೆಯೇ ಮುಂದುವರೆಯಲಿದ್ದು, ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಪ್ರತಿ ವರ್ಷ ಪರಿಶಿಷ್ಟ ಜಾತಿಯ 1ರಿಂದ 5 ನೇ ತರಗತಿಯ ಬಾಲಕರಿಗೆ ರೂ. 1000, ಬಾಲಕಿಯರಿಗೆ ರೂ. 100, 6ರಿಂದ 7ನೇ ತರಗತಿಯ ಬಾಲಕರಿಗೆ ರೂ. 1150, ಬಾಲಕಿಯರಿಗೆ ರೂ. 1250 ಹಾಗೂ 8ನೇ ತರಗತಿಯ ಬಾಲಕರಿಗೆ ರೂ. 1250, ಬಾಲಕಿಯರಿಗೆ ರೂ. 1350 ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. 2022-23ನೇ ಸಾಲಿನಲ್ಲಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಆನೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಹಿಂದಿನ ಸಾಲುಗಳಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ಮಕ್ಕಳಿಗೆ ಶಿಕ್ಷಣ ಇಲಾಖೆಯ ಸಾಟ್ಸ್ ದತ್ತಾಂಶ ಬಳಸಿಕೊಂಡು ನವೀಕರಿಸಲಾಗಿದೆ. ಈ ಯೋಜನೆಯಡಿ 113.13 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 6.84.992 ವಿದ್ಯಾರ್ಥಿಗಳಿಗೆ 78.77 ಕೋಟಿ ರೂ. ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.
9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುತ್ತಿದೆ. ಇದು ಸಂಪೂರ್ಣ ಕೇಂದ್ರ ವಲಯ ಕಾರ್ಯಕ್ರಮವಾಗಿದ್ದು, ಈ ಯೋಜನೆಗಾಗಿ ಕೇಂದ್ರ ಸರ್ಕಾರ ಶೇ.60 ಹಾಗೂ ರಾಜ್ಯ ಸರ್ಕಾರ ಶೇ.40ರ ಅನುಪಾತದಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ 2019-20 ಸಾಲಿನಲ್ಲಿ 24.76 ಕೋಟಿ ರೂ. 2020-21ನೇ ಸಾಲಿನಲ್ಲಿ 62.30 ಕೋಟಿ ರೂ. ಹಾಗೂ 2021-22 ನೇ ಸಾಲಿನಲ್ಲಿ 76.58 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಅವರು ತಿಳಿಸಿದರು.