ಮತದಾರರ ಮಾಹಿತಿ ಕಳವು ಪ್ರಕರಣ: ಐಎಎಸ್ ಅಧಿಕಾರಿ ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಬೆಂಗಳೂರು, ಡಿ.9: ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನಗರದ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.
ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತುಗೊಂಡಿರುವ ಶ್ರೀನಿವಾಸ್, ಚಿಲುಮೆ ಸಂಸ್ಥೆಯ ಸಿಬ್ಬಂದಿ ಜ್ಯೋತಿಲಕ್ಷ್ಮೀ ಹಾಗೂ ಕೆಂಪೇಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಹಲಸೂರು ಗೇಟ್ ಠಾಣಾಧಿಕಾರಿ ಕಳೆದ ವಾರ ಕೆ.ಶ್ರಿನಿವಾಸ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದರು. ವಿಚಾರಣೆಗೆ ಹಾಜರಾಗದ ಶ್ರಿನಿವಾಸ್ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಡಿಸೆಂಬರ್ 2ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.