ಗುಜರಾತ್: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಭೂಪೇಂದ್ರ ಪಟೇಲ್ ಆಯ್ಕೆ; ಎರಡನೇ ಬಾರಿ ಸಿಎಂ ಗಾದಿ

ಅಹಮದಾಬಾದ್: ಶನಿವಾರ ನಡೆದ ಸಭೆಯಲ್ಲಿ ಬಿಜೆಪಿ ಶಾಸಕರು ಅವಿರೋಧವಾಗಿ ಭೂಪೇಂದ್ರ ಪಟೇಲ್ ರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದು, ಭೂಪೇಂದ್ರ ಪಟೇಲ್ ಅವರು ಸತತ ಎರಡನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಗುರುವಾರ, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 182 ಸ್ಥಾನಗಳ ಪೈಕಿ 156 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಸಾಧಿಸಿತ್ತು. ಒಂದು ದಿನದ ನಂತರ, ಮುಂದಿನ ಸರ್ಕಾರ ರಚನೆಗಾಗಿ ಪಟೇಲ್ ತಮ್ಮ ಇಡೀ ಸಂಪುಟದೊಂದಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಬಿಎಸ್ ಯಡಿಯೂರಪ್ಪ ಮತ್ತು ಅರ್ಜುನ್ ಮುಂಡಾ ಶನಿವಾರ ನಡೆದ ಸಭೆಗೆ ಪಕ್ಷದ ಕೇಂದ್ರ ವೀಕ್ಷಕರಾಗಿ ಉಪಸ್ಥಿತರಿದ್ದರು.
ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭ ಡಿಸೆಂಬರ್ 12 ರಂದು ನಡೆಯಲಿದೆ ಎಂದು ಬಿಜೆಪಿ ಈಗಾಗಲೇ ಘೋಷಿಸಿದೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.





