ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪ್ರಕರಣ ಪತ್ತೆ: ಡಾ.ಕೆ.ಸುಧಾಕರ್
ಆತಂಕ ಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ
ಬೆಂಗಳೂರು, ಡಿ.12: ರಾಯಚೂರು ಜಿಲ್ಲೆಯಲ್ಲಿ ಮಾನ್ವಿ ತಾಲೂಕಿನ ಐದು ವರ್ಷದ ಬಾಲಕಿಗೆ ಝೀಕಾ ವೈರಸ್ ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿರುವ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 15 ದಿನಗಳಿಂದ ಜ್ವರ, ವಾಂತಿ, ಬೇಧಿಯಿಂದ ಬಳಲುತ್ತಿದ್ದ ಬಾಲಕಿಗೆ ಮೊದಲು ಸಿಂಧನೂರು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಡೆಂಗ್ ಜ್ವರದ ಹಿನ್ನೆಲೆಯಲ್ಲಿ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರೆಸಲಾಯಿತು ಎಂದರು.
ವಿಮ್ಸ್ ಆಸ್ಪತ್ರೆಯ ವೈದ್ಯರು ಬಾಲಕಿಯ ರಕ್ತ ಹಾಗೂ ಮೂತ್ರದ ಮಾದರಿಯನ್ನು ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್ಗೆ ಕಳುಹಿಸಿದರು. ಅಲ್ಲಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ವೈರಸ್ ಸೋಂಕಿತ ಬಾಲಕಿ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಅವರ ಕುಟುಂಬ ಸದಸ್ಯರ ರಕ್ತ ಹಾಗೂ ಮೂತ್ರದ ಮಾದರಿಯನ್ನು ಸಂಗ್ರಹಿಸಲಾಗಿದೆ ಎಂದು ಅವರು ತಿಳಿಸಿದರು.
ಅಲ್ಲದೆ, ರಾಯಚೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಝೀಕಾ ವೈರಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಝೀಕಾ ವೈರಸ್ಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.
ಆರೋಗ್ಯ ಸೌಧದಲ್ಲಿ ಇಂದು ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.
— Dr Sudhakar K (@mla_sudhakar) December 12, 2022
₹200 ಕೋಟಿ ವೆಚ್ಚದಲ್ಲಿ ಭೀಮನಕುಪ್ಪೆ ಬಳಿ ನಿರ್ಮಿಸುತ್ತಿರುವ ರಾಜೀವ್ ಗಾಂಧಿ ಸಾರ್ವಜನಿಕ ಆರೋಗ್ಯ ಸಂಸ್ಥೆಯ ಪ್ರಗತಿ ಸೇರಿದಂತೆ ಇಲಾಖೆಗೆ ಸಂಬಂಧಪಟ್ಟ ಅನೇಕ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
1/4 pic.twitter.com/y88LUcsD6A