ದ.ಕ.ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು, ಡಿ.14: ದ.ಕ.ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದ.ಕ. ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ದ.ಕ.ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಲಾಯಿತು.
ದ.ಕ.ಜಿಲ್ಲಾಧಿಕಾರಿ ರವಿಕುಮ್ ಎಂ.ಆರ್.ಚಾಲನೆ ನೀಡಿ ಸರಕಾರಿ ನೌಕರರು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಕ್ರೀಡೆಯು ಮಹತ್ವದ ಪಾತ್ರ ವಹಿಸುತ್ತದೆ. ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಸರಕಾರಿ ನೌಕರರಿಗೆ ಈ ಕ್ರೀಡಾಕೂಟವು ಹೊಸ ಹುಮ್ಮಸ್ಸನ್ನು ನೀಡುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.
ದ.ಕ.ಜಿಪಂ ಸಿಇಒ ಡಾ.ಕುಮಾರ್ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಜಯಪ್ಪ ಲಮಾಣಿ ಕ್ರೀಡಾಪ್ರತಿಜ್ಞೆ ಬೋಧಿಸಿದರು. ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾದ ನಾಗರಾಜ್‌ಖಾರ್ವಿ, ಮಣಿಕಂಠ, ಇಂದಿರಾ, ಭಾಗೀರಥಿ ರೈ ಕ್ರೀಡಾಜ್ಯೋತಿ ಹಸ್ತಾಂತರಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೈ. ನಾಯಕ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಕೆ.ಕೃಷ್ಣ, ಮತ್ತಿತರರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು.