ಬೆಂಗಳೂರು: ಪ್ರೀತಿಸಿದ ಯುವತಿಯ ದ್ವಿಚಕ್ರ ವಾಹನಕ್ಕೆ ಬೆಂಕಿ ಇಟ್ಟ ಆರೋಪಿ ಸೆರೆ

ಬೆಂಗಳೂರು, ಡಿ.15:ಪ್ರೀತಿಸಿದ ಯುವತಿಯ ದ್ವಿಚಕ್ರ ವಾಹನಕ್ಕೆ ಬೆಂಕಿ ಇಟ್ಟು ಪರಾರಿಯಾಗಿದ್ದ ಯುವಕನನ್ನು ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ವಿಕ್ರಮ್ ಬಂಧಿತ ಆರೋಪಿಯಾಗಿದ್ದು, ಯುವತಿಯ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿ ಪರಾರಿಯಾಗುವ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಬಂಧಿಸಲಾಗಿದೆ.
ವಿಕ್ರಮ್ 3 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಇತ್ತೀಚಿಗೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಸೇರಿದ್ದನು. ಡ್ರಗ್ಸ್ ಪ್ರಕರಣದಲ್ಲಿ ಸುಮಾರು ಎಂಟು ತಿಂಗಳ ಕಾಲ ಜೈಲು ವಾಸ ಅನುಭವಿಸಿದ ವಿಕ್ರಮ್‍ಗೆ ಜೈಲಿನಿಂದ ಬಿಡುಗಡೆಯಾದ ನಂತರ ತಾನು ಪ್ರೀತಿಸುತ್ತಿದ್ದ ಯುವತಿ ಮೇಲೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗಿದೆ.
ತಾನು ಪ್ರೀತಿಸುತ್ತಿದ್ದ ಯುವತಿಯೇ ಡ್ರಗ್ ಪೆಡ್ಲಿಂಗ್ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎಂದು ಅನುಮಾನಿಸಿದ ವಿಕ್ರಮ್ ಈ ಕೃತ್ಯ ಎಸಗಿದ್ದಾನೆ. ದೂರಿನ ಅನ್ವಯ ಪ್ರಕರಣ ದಾಖಲಿಸಿದ್ದ ಹಲಸೂರು ಠಾಣಾ ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಆರೋಪಿ ವಿಕ್ರಮ್‍ನನ್ನು ಬಂಧಿಸಿದ್ದಾರೆ.





