ರಾಜ್ಯಾದ್ಯಂತ 11,133 ಪೌರಕಾರ್ಮಿಕರ ಖಾಯಮಾತಿಗೆ ಸರಕಾರ ತೀರ್ಮಾನ: ಕೋಟೆ ಎಂ.ಶಿವಣ್ಣ

ಚಿಕ್ಕಮಗಳೂರು, ಡಿ.15: ದೇಶ ಕಾಯುವ ಸೈನಿಕರಿಗೆ ಹೇಗೆ ರಕ್ಷಣೆ ನೀಡಲಾಗುತ್ತದೆಯೋ ಅದೇ ರೀತಿ ನಗರವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರ ರಕ್ಷಣೆಗೆ ಸಫಾಯಿ ಕರ್ಮಚಾರಿ ಆಯೋಗ ಬದ್ಧವಾಗಿದೆ. ರಾಜ್ಯಾದ್ಯಂತ 11,133 ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರಕಾರ ತೀರ್ಮಾನಿಸಿದ್ದು, ಶೀಘ್ರದಲ್ಲೇ ಖಾಯಂಗೊಳಿಸುವ ಪ್ರಕ್ರಿಯೆಗೆ ಸರಕಾರ ಚಾಲನೆ ನೀಡಲಿದೆ ಎಂದು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ತಿಳಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ನಿವೇಶನ, ವಸತಿ, ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳನ್ನು ನೀಡಲು ಈಗಾಗಲೇ ಮಾರ್ಗಸೂಚಿ ತಯಾರಿಸಲಾಗಿದೆ. ಸ್ವಚ್ಛತೆ ಕಾರ್ಯದ ವೇಳೆ ಪೌರಕಾರ್ಮಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಶೂ, ಕೈಗವಸು, ಮಾಸ್ಕ್ ಗಳನ್ನು ನೀಡಲಾಗುತ್ತಿದೆ. ಕಾರ್ಮಿಕರಿಗೆ ತರಬೇತಿ ಮತ್ತು ಸರಕಾರಿ ಸೌಲಭ್ಯಗಳ ಮಾಹಿತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ನ್ಯಾಷನಲ್ ಸ್ಕೂಲ್ ಆಫ್ ಲಾ ನಡೆಸಿದ ಸರ್ವೇಯಂತೆ ಪೌರಕಾರ್ಮಿಕರ ಆಯಸ್ಸು ಕ್ಷೀಣಿಸುತ್ತಿದೆ ಎಂಬ ವರದಿ ನೀಡಿದ್ದು, ಅವರ ಆರೋಗ್ಯದ ಹಿತದೃಷ್ಟಿಯಿಂದ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪೌರಕಾರ್ಮಿಕರಿಗೆ ಜೀವವಿಮೆ ಮಾಡಿಸಲಾಗುತ್ತಿದೆ ಎಂದ ಅವರು, ಬೆಳಗ್ಗೆಯೇ ಪೌರಕಾರ್ಮಿಕರು ಕೆಲಸ ನಿರ್ವಹಿಸಲು ಮುಂದಾಗುತ್ತಿದ್ದು, ಅವರಿಗೆ ಅನುಕೂಲವಾಗುವಂತೆ ವಿಶ್ರಾಂತಿ ಗೃಹ ನಿರ್ಮಿಸಲಾಗುತ್ತಿದೆ. ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುವವರಿಗೆ ನೇರಪಾವತಿ ಮೂಲಕ ವೇತನ ನೀಡಲಾಗುತ್ತಿದೆ. ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವರಿಗೆ ಭದ್ರತೆ ಇಲ್ಲವಾಗಿದ್ದು, ಅವರ ಸಮಸ್ಯೆಗಳನ್ನು ಆಲಿಸಲು ಸಿಎಂ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಇಲಾಖೆಯ ಹಿರಿಯ ಅಧಿಕಾರಿ ರಾಕೇಶ್ ಸಿಂಗ್ ನೇತೃತ್ವದ ಸಮಿತಿ ರಚಿಸಲಾಗಿದ್ದು, 11,133 ನೌಕರರನ್ನು ಖಾಯಂಗೊಳಿಸಲಾಗುವುದು ಎಂದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 228 ಪೌರಕಾರ್ಮಿಕರನ್ನು ಖಾಯಂಗೊಳಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡುತ್ತಿದ್ದು, ಒಂದೂವರೆ ತಿಂಗಳಲ್ಲಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
10 ಮಹಾನಗರ ಪಾಲಿಕೆಗಳಲ್ಲಿ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಲು ಸರಕಾರ ತೀರ್ಮಾನ ಕೈಗೊಂಡಿದ್ದು, ಈ ಪೌರಕಾರ್ಮಿಕರಿಗೆ ನೇರಪಾವತಿ ಮೂಲಕ ವೇತನ ನೀಡುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದ ಅವರು, ಪೌರಕಾರ್ಮಿಕರ ಸಮಸ್ಯೆ ಆಲಿಸದ ಮತ್ತು ಗೌರವ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿಲಾಗುತ್ತಿದೆ. ಅವರ ಕೌಶಲ್ಯಕ್ಕೆ ಒತ್ತು ನೀಡಲಾಗಿದೆ. ಸಫಾಯಿ ಕರ್ಮಚಾರಿ ಆಯೋಗದ ರಚನೆ ಪೌರಕಾರ್ಮಿಕರಿಗೆ ಆಶಾಕಿರಣವಾಗಿದೆ ಎಂದು ಅಭಿಪ್ರಾಯಿಸಿದರು.
ಇತ್ತೀಚೆಗೆ 7ರಿಂದ 8 ಮಂದಿ ಮ್ಯಾನುಚಲ್ ಸ್ಲ್ಯಾವೆಂಜರ್‍ಗಳು ಮೃತಪಟ್ಟಿದ್ದಾರೆ. 1996ರಿಂದ ಇದುವರೆಗೆ 90 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯ 2,700 ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳಿದ್ದು, 2013ರ ಆಕ್ಟ್ ಪ್ರಕಾರ ಮ್ಯಾನ್ಯುವಲ್ ಸ್ಕ್ಯಾವೆಂಜರ್‍ಗಳನ್ನು ಕೆಲಸಕ್ಕೆ ಬಳಸಿಕೊಂಡಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಫಾಯಿ ಕರ್ಮಚಾರಿ ನಿಗಮ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಸರ್ಜನ್ ಮೋ ಹನ್ ಕುಮಾರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರ, ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಉಪಸ್ಥಿತರಿದ್ದರು.
ಪೌರಕಾರ್ಮಿಕರ ಖಾಯಂ ನೇಮಕಾತಿ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಸರಕಾರ ಪೌರಕಾರ್ಮಿಕರ ಖಾಯಮಾತಿಗೆ ಸರಕಾರ ತೀರ್ಮಾನಿಸಿದೆ. ಪೌರಕಾರ್ಮಿಕರಿಗೆ ವಸತಿ ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳನ್ನು ನೀಡಲು ಸರಕಾರ ಕ್ರಮವಹಿಸಿದೆ. ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸದ ಹಾಗೂ ಗೌರವ ನೀಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೌರಕಾರ್ಮಿಕರಿಗೆ ಏಕರೂಪದ ಉಡುಗೆ ನೀಡುವ ನಿಟ್ಟಿನಲ್ಲಿ ಪರಿಣಿತರ ಸಮಿತಿ ರಚಿಸಲಾಗಿದೆ. ಉತ್ತರ ಕರ್ನಾಟಕ, ಮಧ್ಯಕನಾಟಕ ಹಾಗೂ ದಕ್ಷಿಣ ಕರ್ನಾಟಕ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಏಕ ರೂಪದ ಉಡುಪು ನೀಡಲಾಗುವುದು.
- ಕೋಟೆ ಎಂ.ಶಿವಣ್ಣ
------------------------------
ಪೌರಕಾರ್ಮಿಕರ ರಕ್ಷಣೆಯೇ ಆಯೋಗದ ಮುಖ್ಯಧ್ಯೇಯವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಸಾವಿರ ಜನರಿಗೆ ಒಬ್ಬ ಪೌರಕಾರ್ಮಿಕನಿದ್ದು, ಸಾವಿರಕ್ಕೆ ಒಬ್ಬ ಪೌರಕಾರ್ಮಿಕರನ್ನು ನಿಯೋಜಿಸಲು ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ 500 ಜನರಿಗೆ ಒಬ್ಬ ಪೌರಕಾರ್ಮಿಕ ನೇಮಕ ಸಂಬಂಧ ಶಿಫಾರಸು ಮಾಡಲಾಗಿದೆ.
- ಕೋಟೆ ಎಂ.ಶಿವಣ್ಣ







