ಒಳ ಮೀಸಲಾತಿ: ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯ ಮೊದಲ ಸಭೆ
ಬೆಂಗಳೂರು, ಡಿ. 17: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧದ ನ್ಯಾ.ಸದಾಶಿವ ಆಯೋಗದ ವರದಿ ಕುರಿತು ಶಿಫಾರಸ್ಸು ಮಾಡುವ ಸಂಬಂಧ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗಿರುವ ಸಂಪುಟ ಉಪ ಸಮಿತಿಯ ಮೊದಲ ಸಭೆ ನಡೆಯಿತು.
ಶನಿವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಆರೋಗ್ಯ ಸಚಿವ ಡಾ.ಸುಧಾಕರ್, ಮೀನುಗಾರಿಕೆ ಸಚಿವ ಎಸ್.ಅಂಗಾರ ಸಭೆಯಲ್ಲಿ ಪಾಲ್ಗೊಂಡಿದ್ದು, ಔಪಚಾರಿಕವಾಗಿ ಸಮಾಲೋಚನೆ ನಡೆಸಿದೆ ಎಂದು ಗೊತ್ತಾಗಿದೆ.
ಸದಾಶಿವ ಆಯೋಗದ ವರದಿಯ ಬಗ್ಗೆ ಪರ-ವಿರೋಧದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ವರದಿ ಮಂಡನೆ ಸಾಧಕ-ಬಾಧಕಗಳ ಬಗ್ಗೆ ಸಂಪುಟ ಉಪ ಸಮಿತಿ ಚರ್ಚಿಸಿದ್ದು, ಸದ್ಯಕ್ಕೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಮುಂದಿನ ಸಭೆಯಲ್ಲಿ ಈ ಕುರಿತು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.