ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮವಹಿಸಿ: ರಾಜೇಶ್ ಕರೆ

ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಶ್ರಮಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಕರೆ ನೀಡಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ‘ಅಟಲ್ ಉತ್ಸವ’ ಕಾರ್ಯಕ್ರಮದಲ್ಲಿ ಉಡುಪಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಘಟಕಗಳು ರವಿವಾರ ಇಲ್ಲಿನ ಎಂಜಿಎಂ ಮೈದಾನದಲ್ಲಿ ಆಯೋಜಿಸಿದ್ದ ‘ಬೂತ್ ಸಂಗಮ’ದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಈ ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಕಾನೂನು ಇರಬೇಕು ಎಂದು ಪ್ರತಿಪಾದಿಸಿದ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ ನಂತರ ಏಕರೂಪ ನಾಗರಿಕ ಸಂಹಿತೆ ತರಲಾಗುವುದು ಎಂದು ಹೇಳಿದರು.
2019ರಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಸಿಎಂ ಆದ ನಂತರ ಕೇಂದ್ರ ಸರಕಾರದ ಕಿಸಾನ್ ಸಮ್ಮಾನ್ ಯೋಜನೆಗೆ 40 ಲಕ್ಷ ರೈತರು ದಾಖಲಾ ಗುವಂತೆ ನೋಡಿಕೊಂಡರು. ಈ ಹಿಂದೆ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಕೇವಲ 17 ರೈತರು ಮಾತ್ರ ಈ ಯೋಜನೆಯ ಲಾಭ ಪಡೆಯುತ್ತಿದ್ದರು. ಜನವರಿ 2ರಿಂದ ಜನವರಿ 12 ರವರೆಗೆ ಪಕ್ಷದ 'ಬೂತ್ ವಿಜಯ್' ಅಭಿಯಾನದ ಅಂಗವಾಗಿ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲ್, ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ನಡೆದ ಬೂತ್ ಸಂಗಮ ಕಾರ್ಯಕ್ರಮ ಇಡೀ ರಾಜ್ಯ ಮತ್ತು ರಾಷ್ಟ್ರಕ್ಕೆ ಮಾದರಿಯಾಗಿದೆ. ರಾಜ್ಯದಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದರು.