ಜಲೀಲ್ ಹತ್ಯೆ ಪ್ರಕರಣ: ಕುಟುಂಬಕ್ಕೆ 1 ಕೋ.ರೂ. ಪರಿಹಾರ ನೀಡಲು ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹ

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳದ 4ನೇ ಬ್ಲಾಕಿನಲ್ಲಿ ಶನಿವಾರ ರಾತ್ರಿ ನಡೆದ ಜಲೀಲ್ ಹತ್ಯೆ ಸಹಿತ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಅಹಿತಕರ ಘಟನೆಗಳನ್ನು ಮಟ್ಟ ಹಾಕಬೇಕು ಕರ್ನಾಟಕ ಮುಸ್ಲಿಂ ಜಮಾಅತ್‌ನ ನಿಯೋಗವು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಮೂಲಕ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.
ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ನಿಯೋಗವು ಕೊಲೆಗೈದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ 1ಕೋ.ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಅಬೂಸುಫ್ಯಾನ್ ಮದನಿ, ಈ ಹಿಂದೆ ದ.ಕ. ಜಿಲ್ಲೆಯಲ್ಲಿ ಕೊಲೆ ನಡೆದಾಗ ಮುಖ್ಯಮಂತ್ರಿ ತಾರತಮ್ಯ ನೀತಿ ತೋರಿದ್ದರಿಂದ ಸಹಜವಾಗಿ ಸಾರ್ವಜನಿಕರಲ್ಲಿ ಅಸಮಾಧಾನ ಉಂಟಾಗಿದೆ. ಚುನಾವಣೆ ಹತ್ತಿರ ಬಂದಾಗ ಕರಾವಳಿಯಲ್ಲಿ ಕೊಲೆಯಾಗುವುದು ಸಾಮಾನ್ಯವಾಗಿ ಬಿಟ್ಟಿದೆ. ಕೊಲೆಗೆ ಧರ್ಮದ ಬಣ್ಣ ಬಳಿಯದೆ ಕೊಲೆಯಾದ ಫಾಝಿಲ್, ಮಸೂದ್, ಜಲೀಲ್‌ರ ಮನೆಗೂ ಮುಖ್ಯಮಂತ್ರಿ ಭೇಟಿ ನೀಡಬೇಕು ಮತ್ತು ತಕ್ಷಣ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು ಎಂದರು.
ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ ಮಾತನಾಡಿ, ಕೊಲೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಬಂಧನವಾದ ಕೆಲವೇ ದಿನಗಳಲ್ಲಿ ಆರೋಪಿಗಳು ಜಾಮೀನು ಪಡೆದು ರಾಜಾರೋಷವಾಗಿ ಸುತ್ತಾಡುವುದಕ್ಕೆ ಕಡಿವಾಣ ಹಾಕಬೇಕು. ಪೊಲೀಸ್ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆಯ ಮೇಲೆ ಜನರಿಟ್ಟಿರುವ ನಂಬಿಕೆಯನ್ನು ಹುಸಿಗೊಳಿಸಬಾರದು ಎಂದು ಆಗ್ರಹಿಸಿದರು.
ಈ ಸಂದರ್ಭ ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ನ, ರಾಜ್ಯ ಸಮಿತಿ ಸದಸ್ಯ ಅಶ್ರಫ್ ಕಿನಾರ, ದ.ಕ. ಜಿಲ್ಲಾ ಸಮಿತಿ ಸದಸ್ಯ ಮುಹಮ್ಮದ್ ಹನೀಫ್ ಬಜ್ಪೆ, ಮಂಗಳೂರು ತಾಲೂಕು ಸಮಿತಿ ಸದಸ್ಯ ಇಕ್ಬಾಲ್ ಕೃಷ್ಣಾಪುರ ಉಪಸ್ಥಿತರಿದ್ದರು.
ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಕಾಟಿಪಳ್ಳದ ಅಬ್ದುಲ್ ಜಲೀಲ್‌ರ ಮನೆಗೆ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಎಚ್‌ಐ ಅಬೂಸುಫ್‌ಯಾನ್ ಮದನಿ, ಉಪಾಧ್ಯಕ್ಷ ಪಿಪಿ ಅಹ್ಮದ್ ಸಖಾಫಿ ಕಾಶಿಪಟ್ನ ಭೇಟಿ ನೀಡಿ ದುಆಗೈದು ಕುಟುಂಬಕ್ಕೆ ಸಾಂತ್ವನ ಹೇಳಿದರು.