ಕುತ್ತಾರ್: ಖಾಸಗಿ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಮೃತದೇಹ ಚರಂಡಿಯಲ್ಲಿ ಪತ್ತೆ; ಅಪರಿಚಿತ ವಾಹನ ಢಿಕ್ಕಿ ಶಂಕೆ

ಉಳ್ಳಾಲ: ಖಾಸಗಿ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಆಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ಜಂಕ್ಷನ್ ನ ಚರಂಡಿಯಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಕುಂಬಳೆ ನಿವಾಸಿ ಗಣೇಶ್ ಶೆಟ್ಟಿ ( 45) ಎಂಬವರು ಮೃತ ವ್ಯಕ್ತಿಯಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಡಿ.27 ರಿಂದ ಕರ್ತವ್ಯಕ್ಕೆ ಹಾಜರಾಗದ ಅವರ ಮೃತದೇಹ ಕುತ್ತಾರು ಜಂಕ್ಷನ್ ನಲ್ಲಿರುವ ಚರಂಡಿಯಲ್ಲಿ ಪತ್ತೆಯಾಗಿದೆ.
ಮೃತ ಗಣೇಶ್ ಅವರು ದೇರಳಕಟ್ಟೆಯ ಬೆಳ್ಮ ಭಾಗದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗುವಿನ ಜತೆಗೆ ವಾಸವಾಗಿದ್ದರು. ಪತ್ನಿ ಸರಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಮಂಗಳೂರು: ಹೆಲ್ಮೆಟ್ ಧರಿಸಿಲ್ಲವೆಂದು ಕಾರು ಚಾಲಕನಿಗೆ ನೋಟಿಸ್