ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವು ಪ್ರಕರಣ: ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಧಾರವಾಡ, ಜ. 10 : ಬೆಂಗಳೂರಿನ ನಾಗವಾರದಲ್ಲಿ ಮೆಟ್ರೋ ಕಾಮಗಾರಿಯ ವೇಳೆ ಪಿಲ್ಲರ್ ಕುಸಿತದ ಅವಘಡದಿಂದಾಗಿ ಮಹಿಳೆ ಹಾಗೂ ಮಗುವಿನ ಸಾವನ್ನಪ್ಪಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 10 ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಅವರು ಧಾರವಾಡದ ಪ್ರವಾಸಿ ಮಂದಿರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜನವರಿ 12ರಂದು ಹುಬ್ಬಳ್ಳಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿಯ ಪಿಲ್ಲರ್ ಕುಸಿತದಿಂದಾದ ಅವಘಡದ ಬಗ್ಗೆ ಪ್ರತಿಕ್ರಿಯೆ ನೀಡಿ, ''ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಸಂಗತಿ. ಕಾಮಗಾರಿಯ ಗುತ್ತಿಗೆದಾರರು, ಅವಘಡಕ್ಕೆ ಕಾರಣ ತಿಳಿಯಲು ತನಿಖೆಯನ್ನು ನಡೆಸಲು ಈಗಾಗಲೇ ಸೂಚನೆ ನೀಡಲಾಗಿದೆ. ಮೆಟ್ರೋ ಸಂಸ್ಥೆಯಿಂದ ಮೃತಪಟ್ಟವರಿಗೆ ಪರಿಹಾರ ದೊರೆಯಲಿದೆ' ಎಂದರು.
ಇದನ್ನೂ ಓದಿ: ಬೆಂಗಳೂರು | ಕುಸಿದು ಬಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್: ತಾಯಿ, ಮಗು ಮೃತ್ಯು







