ಅಂಬಾನಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ: ಗುಜರಾತಿನಿಂದ ಆರೋಪಿ ವಿಕ್ರಂ ಸಿಂಗ್‌ನ ಬಂಧನ

ಮುಂಬೈ: ವಾಣಿಜ್ಯ ನಗರಿ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಧೀರೂಭಾಯಿ ಅಂಬಾನಿ ಇಂಟರ್‌ನ್ಯಾಶನಲ್ ಸ್ಕೂಲ್ ಅನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಜನವರಿ 11 ರಂದು ಶಾಲಾ ಅಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ಬೆದರಿಕೆ ಹಾಕಿದ್ದ ವಿಕ್ರಂ ಸಿಂಗ್ ಎಂಬಾತನನ್ನು ಗುಜರಾತ್ ನಿಂದ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಶಾಲೆಯ ಆವರಣದಲ್ಲಿ "ಟೈಮ್ ಬಾಂಬ್" ಅನ್ನು ಇಟ್ಟಿರುವುದಾಗಿ ಆರೋಪಿ ಹೇಳಿಕೊಂಡಿದ್ದು, ಇದು ಕೆಲ ಕಾಲ ಆತಂಕವನ್ನು ಸೃಷ್ಟಿಸಿತ್ತು. ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ಪತ್ತೆಯಾಗಿತ್ತು ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಶಾಲಾ ಅಧಿಕಾರಿಗಳ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (1) (ಬಿ) (ಸಾರ್ವಜನಿಕರಿಗೆ ಭಯ ಅಥವಾ ಆತಂಕವನ್ನು ಉಂಟುಮಾಡುವ ಉದ್ದೇಶ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.





