ಜ.22ರಂದು ಉಡುಪಿಯಲ್ಲಿ ಕಾಂಗ್ರೆಸ್‌ನಿಂದ ‘ಪ್ರಜಾ ಧ್ವನಿ’ ಸಮಾವೇಶ
ಸುರ್ಜೆವಾಲಾ, ಸಿದ್ದರಾಮಯ್ಯ ಭಾಗಿ, 25 ಸಾವಿರ ಮಂದಿ ಸೇರುವ ನಿರೀಕ್ಷೆ: ಧ್ರುವನಾರಾಯಣ

ಉಡುಪಿ, ಜ.18: ಕಾಂಗ್ರೆಸ್ ಸರಕಾರದ ಸಾಧನೆಗಳ ಬಗ್ಗೆ ಜನಜಾಗೃತಿ ಮೂಡಿಸುವ ‘ಪ್ರಜಾ ಧ್ವನಿ’ ಸಮಾವೇಶವನ್ನು ಜ.22ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಮಿಶನ್ ಕಂಪೌಂಡ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ತಿಳಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಮುಖಂಡರಾದ ಕೆ.ಎಚ್.ಮುನಿಯಪ್ಪ, ಡಾ.ಪರಮೇಶ್ವರ, ವೀರಪ್ಪ ಮೊಯ್ಲಿ, ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್ ಮೊದಲಾದವರು ಭಾಗವಹಿಸಲಿರುವರು. ಇದರಲ್ಲಿ 25 ಸಾವಿರಕ್ಕೂ ಹೆಚ್ಚು ಜನ ಭಾಗವಹಿ ಸುವ ನಿರೀಕ್ಷೆ ಇದೆ ಎಂದರು.
ಪ್ರಜಾ ಧ್ವನಿ ಸಮಾವೇಶವನ್ನು ಪ್ರತಿ ಜಿಲ್ಲೆgLಲ್ಲೂ ನಡೆಸಲು ಉದ್ದೇಶಿಸಲಾಗಿದೆ. ಈಗಾಗಲೇ ನಾಲ್ಕೈದು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಕಾಂಗ್ರೆಸ್ ಪಕ್ಷದ ಕೊಡುಗೆ ಮತ್ತು ಅಧಿಕಾರದ ಅವಧಿಯಲ್ಲಿನ ಕಾರ್ಯಕ್ರಮ ತಿಳಿಸಿ ಜನಜಾಗೃತಿ ಮೂಡಿಸುವುದು ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿಯ ವೈಫಲ್ಯವನ್ನು ಜನರ ಮುಂದೆ ಇಡುವುದೇ ಈ ಸಮಾವೇಶದ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಲ್ಲ ಕಡೆ ಉತ್ತಮ ಬೆಂಬಲ ಸಿಗುತ್ತಿದೆ. ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ ಆಗುತ್ತಿದ್ದಾರೆ. ಹಾಲಿ ಶಾಸಕರು ಕೂಡ ಪಕ್ಷಕ್ಕೆ ಸೇರುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಿ ಮತ್ತೆ ಅಧಿಕಾರಕ್ಕೇರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಎರಡನೇ ಬಾರಿಗೆ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ಒಳ್ಳೆಯ ಆಡಳಿತ ಹಾಗೂ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಅವಧಿಯಲ್ಲಿ ಬಿಜೆಪಿ ಯಾವ ರಾಜ್ಯದಲ್ಲೂ ಇಲ್ಲದಂತೆ ಮಿತಿಮೀರಿದ ಭ್ರಷ್ಟಾಚಾರ ನಡೆಸುತ್ತಿದೆ. ಈ ಬಗ್ಗೆ ಆರೋಪವನ್ನು ಅವರ ಪಕ್ಷದ ಶಾಸಕರುಗಳೇ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಬಿಜೆಪಿಯವರಿಗೆ ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ ಅಂಶಗಳನ್ನು ಈಡೇರಿಸಲು ಈವರೆಗೆ ಸಾಧ್ಯವಾಗಿಲ್ಲ. ಈಗ ಜನ ಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಆದರೆ ಅವರ ಜನ ಸಂಕಲ್ಪ ಯಾತ್ರೆ ಚುನಾವಣೆ ಬಂದಾಗ ಮಾತ್ರ, ಚುನಾವಣೆ ನಂತರ ಧನ ಸಂಕಲ್ಪ ಯಾತ್ರೆಯನ್ನು ಮಾಡುತ್ತಿದ್ದಾರೆ. ವ್ಯಾಪಾಕ ಭ್ರಷ್ಟಾಚಾರದ ಮೂಲಕ ಹಣ ಗಳಿಸುವುದೇ ಇವರ ಉದ್ದೇಶವಾಗಿದೆ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿ ರೋಝಿ ಜಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಖಿಲ ಭಾರತ ಮೀನುಗಾರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜ್ಯಸಭಾ ಸದಸ್ಯ ಪ್ರತಾಪನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್, ರಾಜ್ಯ ಮೀನುಗಾರ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೊನೇಗಾರ್, ಪ್ರಖ್ಯಾತ್ ಶೆಟ್ಟಿ, ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಹರೀಶ್ ಕಿಣಿ ಉಪಸ್ಥಿತರಿದ್ದರು.