ಕಾಂಗ್ರೆಸ್ ನಿಂದ ತುಷ್ಟೀಕರಣದ ರಾಜಕೀಯ: ಅಶ್ವತ್ಥನಾರಾಯಣ

ಬಂಟ್ವಾಳ: ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ, ತುಷ್ಟೀಕರಣ ರಾಜಕೀಯ, ಅಧಿಕಾರ ದುರ್ಬಳಕೆ, ಕುಟುಂಬ ರಾಜಕಾರಣ ಮಾಡಿರುವುದೇ ಕಾಂಗ್ರೆಸ್ ಸಾಧನೆಯಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.
ಅವರು ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ನೇತೃತ್ವದಲ್ಲಿ ನಡೆಯುತ್ತಿರುವ ಗ್ರಾಮವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆಯ 5ನೇ ದಿನದ ಪಾದಯಾತ್ರೆಯ ಬಳಿಕ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ ಕಾಲಘಟ್ಟದಲ್ಲಿಯು ಬಿಜೆಪಿ ಮಾದರಿ ಸರಕಾರ ನಡೆಸಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮೀಣ ಭಾಗದ ರಸ್ತೆ, ಕುಡಿಯುವ ನೀರಿಗೆ ಹೆಚ್ಚಿನ ಅದ್ಯತೆ ನೀಡಿದ್ದು, ಸರಳ, ಸಜ್ಜನಿಕೆಯ ಅವರು ಮತ್ತೊಮ್ಮೆ ಶಾಸಕರಾಗಿ ಸಚಿವರಾಗಿ ಬರಬೇಕು ಎಂದರು.
ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಅಭಿವೃದ್ಧಿಯಲ್ಲಿ ಉತ್ತಮ ಸಾಧನೆ ಮಾಡಿದ ಶಾಸಕ ರಾಜೇಶ್ ನಾಯ್ಕ್ ಅವರನ್ನು ನಾವು ಮತ್ತೊಮ್ಮ ಶಾಸಕರನ್ನಾಗಿ ಆಯ್ಕೆ ಮಾಡಬೇಕಾಗಿದೆ ಎಂದರು.
ರಾಜ್ಯ ಬಂದರು, ಮೀನುಗಾರಿಕಾ ಇಲಾಖೆ ಸಚಿವ ಎಸ್.ಅಂಗಾರ ಮಾತನಾಡಿ, ಜನತೆ ಪಕ್ಷಕ್ಕೆ ಅಧಿಕಾರ ನೀಡಿದ್ದು, ಅಭಿವೃದ್ಧಿ ಕಾರ್ಯಗಳ ಮೂಲಕ ಅದನ್ನು ಉಳಿಸಿಕೊಂಡು ಹೋಗಬೇಕು. ಮುಂದಿನ ಬಾರಿ ಯಾವುದೇ ಸಂಶಯವಿಲ್ಲದೆ ಬಂಟ್ವಾಳ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಗಳು ಹಾಗೂ ಮೋದಿ ಸರ್ಕಾರದ ಸಾಧನೆಗಳನ್ನು ಗುರುತಿಸಿ ಈ ಬಾರಿ ಮತ್ತೊಮ್ಮೆ ಬಿಜೆಪಿ ಗೆ ಆಶೀರ್ವಾದ ಮಾಡಬೇಕು ಎಂದು ವಿನಂತಿಸಿದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಪಕ್ಷ ಪ್ರಮುಖರಾದ ಸುಲೋಚನಾ ಜಿ.ಕೆ.ಭಟ್, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಮಾಧವ ಮಾವೆ, ಯಶೋಧರ ಕರ್ಬೆಟ್ಟು, ಮೋಹನ್ ಪಿ.ಎಸ್, ವಜ್ರನಾಥ ಕಲ್ಲಡ್ಕ, ಬರಿಮಾರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ,, ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಯಿ, ಜಿಲ್ಲಾ ಮಾಧ್ಯಮ ಸಂಚಾಲಕ ಸಂದೇಶ್ ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾದ ಮೋನಪ್ಪ ದೇವಸ್ಯ ಉಪಸ್ಥಿತರಿದ್ದರು. ಪಾದಯಾತ್ರೆಯ ಸಂಚಾಲಕ ಬಿ.ದೇವದಾಸ್ ಶೆಟ್ಟಿ ಅನುದಾನಗಳ ವಿವರ ನೀಡಿದರು.
ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಸ್ವಾಗತಿಸಿ, ಕ್ಷೇತ್ರ ಉಪಾಧ್ಯಕ್ಷ ವಜ್ರನಾಥ ಕಲ್ಲಡ್ಕ ವಂದಿಸಿದರು. ಗೋಳ್ತಮಜಲು ಗ್ರಾ.ಪಂ.ಸದಸ್ಯ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು .
