ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ: ಅಣ್ಣಾಮಲೈ ವಿಶ್ವಾಸ
ಬಂಟ್ವಾಳ ಶಾಸಕರ 'ಗ್ರಾಮ ವಿಕಾಸ ಯಾತ್ರೆ' ಸಮಾರೋಪ

ಬಂಟ್ವಾಳ, ಜ.29: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ ಗೆಲುವಿನ ಅಂತರ ಎಷ್ಟೆಂಬುದಷ್ಟೇ ಕುತೂಹಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.
ಅವರು ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಬಂಟ್ವಾಳ ಬಿಜೆಪಿಯ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 'ಗ್ರಾಮ ವಿಕಾಸ ಯಾತ್ರೆ- ಗ್ರಾಮದೆಡೆಗೆ ಶಾಸಕರ ನಡಿಗೆ' ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರವಿದ್ದರೆ ದ.ಕ. ಜಿಲ್ಲೆಯಲ್ಲಿ ಇದಕ್ಕೆ ಪೂರಕವಾಗಿ ಸಂಸದರು, ಶಾಸಕರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಎಂಬ ನಾಲ್ಕು ಕೋಚ್ ಗಳೂ ಇರುವುದರಿಂದ ಸಮಗ್ರ ಅಭಿವೃದ್ಧಿ ಕಂಡಿದೆ ಎಂದು ಅವರು
ತಮಿಳುನಾಡಿನಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೇರಿದಂತೆ ಕರ್ನಾಟಕದಲ್ಲೂ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಮಾತನಾಡಿ, ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿದ್ದು, ಇನ್ನೂ ಒಂದಷ್ಟು ಆಗಬೇಕಿದೆ. ಆದರೆ ಶಾಂತಿಯ ಬಂಟ್ವಾಳ ನಿರ್ಮಾಣ ಮಾಡಿರುವುದು ನನಗೆ ಹೆಚ್ಚಿನ ತೃಪ್ತಿ ತಂದಿದೆ ಎಂದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ. ಭಟ್, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಜಿಲ್ಲಾ ಮಾಧ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಪಾದಯಾತ್ರೆಯ ಸಹ ಸಂಚಾಲಕರಾದ ಮಾಧವ ಮಾವೆ, ಸುದರ್ಶನ್ ಬಜ ಉಪಸ್ಥಿತರಿದ್ದರು.
ಇದೇವೇಳೆ ಇತ್ತೀಚೆಗೆ ನಿಧನರಾದ ಸಾಮಾಜಿಕ ಮುಂದಾಳು ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ರಿಗೆ ಸಮಾರಂಭದಲ್ಲಿ ನುಡಿನಮನ ಸಲ್ಲಿಸಲಾಯಿತು.
ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.