ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾವಳಿ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಫೆ.9: ಬೆಂಗಳೂರು ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್ ಆದೇಶಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಯನ್ನು ಆಕ್ಷೇಪಿಸಿ ನಗರದ ಮಾಯಿಗೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠವು ನಡೆಸಿತು.
ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ಹಾವಳಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಮಾ.6ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರಕಾರ, ಬಿಬಿಎಂಪಿ ಮತ್ತು ಬಿಡಿಎಗೆ ಆದೇಶಿಸಿದೆ.
ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠ, ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ಹಾಕಲಾಗಿದೆ. ಬಿಬಿಎಂಪಿ ಜಾಹೀರಾತು ಬೈಲಾಗಳ ಉಲ್ಲಂಘನೆಯಾಗಿದೆ. ಹೆಬ್ಬಾಳ ಮೇಲುಸೇತುವೆ ಬಳಿ ದೊಡ್ಡ ಜಾಹೀರಾತು ಹಾಕಲಾಗಿದೆ ಎಂದು ಹೇಳಿತು.
ಜೊತೆಗೆ ಈ ಫ್ಲೆಕ್ಸ್, ಬ್ಯಾನರ್, ಪೋಸ್ಟರ್ ನಿಂದ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಕಾಲಕಾಲಕ್ಕೆ ಅಕ್ರಮ ಜಾಹಿರಾತು ಫಲಕಗಳನ್ನು ಏಕೆ ತೆರವುಗೊಳಿಸುತ್ತಿಲ್ಲ ಎಂದು ಪ್ರಶ್ನಿಸಿರುವ ನ್ಯಾಯಾಲಯ ನಿಯಮ ಉಲ್ಲಂಘಿಸಿದವರ ವಿರುದ್ಧ ಎಷ್ಟು ಎಫ್‍ಐಆರ್ ಹಾಕಿದ್ದೀರಿ ಎಂದು ಪ್ರಶ್ನಿಸಿದೆ.
ಈ ನಿಯಮ ಉಲ್ಲಂಘನೆಗೆ ಕಾರಣರಾದ ಅಧಿಕಾರಿಯನ್ನು ಹೊಣೆ ಮಾಡಿಲ್ಲ ಎಂದು ಪ್ರಶ್ನಿಸಿದ ನ್ಯಾಯಾಲಯ, ಆ ಬಗ್ಗೆ ಕೈಗೊಂಡ ಕ್ರಮದ ಮಾಹಿತಿ ನೀಡಲು ಸೂಚನೆ ನೀಡಿ ವಿಚಾರಣೆಯನ್ನು ಮಾ.7ಕ್ಕೆ ನಿಗದಿಪಡಿಸಿದೆ.







