ಡ್ರಗ್ಸ್ ಮಾರಾಟ ದಂಧೆ ವಿರುದ್ಧ ಕಾರ್ಯಾಚರಣೆ ಮುಂದುವರಿಕೆ: ಎಡಿಜಿಪಿ

ಮಂಗಳೂರು: ನಗರದಲ್ಲಿ ಪತ್ತೆಯಾಗಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಡ್ರಗ್ಸ್ ಸೇವನೆ ಮತ್ತು ಮಾರಾಟ ಪ್ರಕರಣದ ವಿರುದ್ಧ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಶಿಕ್ಷಣ ಸಂಸ್ಥೆಗಳ ಆಡಳಿತ ಸಮಿತಿಯ ಸಭೆಯನ್ನು ಎಸಿಪಿಗಳ ನೇತೃತ್ವದಲ್ಲಿ ಕರೆಯಲು ಸೂಚಿಸಲಾಗಿದೆ ಎಂದರು.
ಅನಧಿಕೃತ ಪಿಜಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪಿಜಿಗಳ ಮೇಲೆ ನಿಗಾವಹಿಸಲಾಗುವುದು ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾ ವಹಿಸಲಾಗುವುದು ಎಂದರು.
ನಗರದ ಮಹಿಳಾ ಠಾಣೆಯಲ್ಲಿ ಲಂಚದ ಹಾವಳಿ ವಿಪರೀತವಾಗಿದೆ ಎಂಬ ಬಗ್ಗೆ ಸಾರ್ವಜನಿಕರ ದೂರಿನ ಬಗ್ಗೆ ಸುದ್ದಿಗಾರರು ಗಮನ ಸೆಳೆದಾಗ ದಾಖಲೆ ಕೊಟ್ಟರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಗೋವಾ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ನಂತೂರಿನಲ್ಲಿ ನಡೆದ ಭದ್ರತಾ ವೈಫಲ್ಯ ಪ್ರಕರಣದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನು ಮುಂದೆ ಇಂತಹ ಘಟನೆ ಸಂಭವಿಸದಂತೆ ಎಚ್ಚರವಹಿಸಲಾಗುವುದು. ಅಗತ್ಯವಿರುವಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆಗೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು.
ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ , ಪಶ್ಚಿಮ ವಲಯ ಡಿಐಜಿ ಡಾ.ಚಂದ್ರ ಗುಪ್ತ, ಡಿಸಿಪಿಗಳಾದ ಅಂಶು ಕುಮಾರ್ ಮತ್ತು ಕೆ.ಬಿ.ದಿನೇಶ್ ಕುಮಾರ್ ಉಪಸ್ಥಿತರಿದ್ದರು.