ಕೊಡವೂರಿನಲ್ಲಿ ಕಾನೂನು ಕಾಲೇಜಿನ ಎನ್ನೆಸ್ಸೆಸ್ ವಾರ್ಷಿಕ ಶಿಬಿರ

ಉಡುಪಿ: ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯದ ಆಶಯ ದೊಂದಿಗೆ ಸ್ಥಾಪಿತವಾದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ, ಲೋಕಜ್ಞಾನವನ್ನು ಬೆಳಸಿಕೊಳ್ಳಲು, ವ್ಯಕ್ತಿತ್ವ ವಿಕಸನ ಮತ್ತು ಜೀವನ ಕಲೆ ಕಲಿಯಲು ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದ್ದಾರೆ.
ಕೊಡವೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಜಂಟಿಯಾಗಿ ಆಯೋಜಿಸಿರುವ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ-2023ನ್ನು ಉದ್ಘಾಟಿಸಿ ಮಾತನಾಡುತಿದ್ದರು.
ವಿದ್ಯಾರ್ಥಿಗಳು ಶಿಬಿರದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಗಳ ಅನಾವರಣ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಗರಸಭೆಯ ಸದಸ್ಯ ವಿಜಯ ಕೊಡವೂರು ಮಾತನಾಡಿ, ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ವನ್ನು ಪಡೆಯುವ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿ ಮಾಡುವುದು ಮತ್ತು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದು ಅವಶ್ಯಕ ಎಂದು ಹೇಳಿದರು.
ಶಂಕರನಾರಾಯಣ ಶಿಕ್ಷಣಾ ಪ್ರತಿಷ್ಟಾನದ ಅಧ್ಯಕ್ಷ ರಾಘವೇಂದ್ರ ರಾವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಘುನಾಥ್ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್, ಉದ್ಯಮಿಗಳಾದ ಸುರೇಶ್ ಶೇರಿಗಾರ್, ನಾಗರಾಜ್ ಸುವರ್ಣ, ಯುವಕ ಸಂಘದ ಅಧ್ಯಕ್ಷ ಪ್ರಭಾತ್ ಕೊಡವೂರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವಿನುತ ಕಿರಣ್ ಉಪಸ್ಥಿತರಿದ್ದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ನವೀನ್‌ಚಂದ್ರ ಸಿ.ಬಿ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ನಮ್ರತಾ ವಂದಿಸಿದರು. ಮಮತಾ ಕೆ.ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.